ಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ.
ಮೈಸೂರು ಅನಂತಸ್ವಾಮಿ ಅವರ ಧಾಟಿ ಅಳವಡಿಸಿ ಆಲಾಪ ಪುನರಾವರ್ತನೆ ಇಲ್ಲದೆ 2 ನಿಮಿಷ 30 ಸೆಕೆಂಡುಗಳಲ್ಲಿ ಹಾಡಬೇಕು ಎಂದು ರಾಜ್ಯ ಸರ್ಕಾರ 2022 ರ ಸೆಪ್ಟೆಂಬರ್ 25 ರಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಕಿಕ್ಕೇರಿ ಕೃಷ್ಣಮೂರ್ತಿ ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಜಾಗೊಳಿಸಿ 2024ರ ಏಪ್ರಿಲ್ 24ರಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿತ್ತು. ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಸೋಮವಾರ ಅರ್ಜಿಯನ್ನು ವಜಾಗೊಳಿಸಿ ಏಕ ಸದಸ್ಯ ಪೀಠದ ಆದೇಶವನ್ನು ಕಾಯಂಗೊಳಿಸಿದೆ. ಅದು ನಿಮ್ಮ ಸಂವಿಧಾನ ಬದ್ಧವಾದ ಮೂಲಭೂತ ಹಕ್ಕಿಗೆ ಚ್ಯುತಿ ಉಂಟು ಮಾಡಿಲ್ಲ. ನಿಮಗೆ ಬೇಕಾದಂತೆ ಹಾಡದಂತೆ ನಿಮ್ಮನ್ನು ತಡೆಯುತ್ತಿರುವವರು ಯಾರು? ಅದನ್ನು ನಿಷೇಧಿಸಿರುವ ಸರ್ಕಾರದ ಕ್ರಮವನ್ನು ತೋರಿಸಿ ಎಂದು ಪ್ರಶ್ನಿಸಿದೆ. ಮೆರಿಟ್ ಇಲ್ಲದ ಕಾರಣ ಮೇಲ್ಮನವಿ ವಜಾಗೊಳಿಸಲಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.

