ಬೆಂಗಳೂರು: ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 10,000 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಉದ್ದೇಶದ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ ಸಂಬಂಧ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸಲು ಹೈಕೋರ್ಟ್ ಮಧ್ಯಂತರ ತಡೆ ನೀಡಿ ಮಂಗಳವಾರ ಆದೇಶಿಸಿದೆ.
ಸಾಗರದ ಅಖಿಲೇಶ್ ಚಿಪ್ಲಿ, ಉಡುಪಿಯ ಡಾ. ರವೀಂದ್ರನಾಥ್ ಮತ್ತು ಶಿವಮೊಗ್ಗದ ಮನೋಹರ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಯೋಜನೆಗೆ ಸಂಬಂಧಿಸಿದಂತೆ ವಾದ ಪ್ರತಿವಾದ ಆಲಿಸಿದ ಪೀಠ ಯೋಜನೆಯಿಂದ ಆಗುವ ಪರಿಣಾಮಗಳ ಬಗ್ಗೆ ಆತಂಕವಿದೆ. ಈ ಕುರಿತು ಪರಿಶೀಲನೆ ನಡೆಸಬೇಕಿದೆ. ಹೀಗಾಗಿ ಮುಂದಿನ ಆದೇಶದವರೆಗೆ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸಬಾರದು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.
ಅಭಯಾರಣ್ಯವು ಅಪರೂಪದ ಸಿಂಹಬಾಲದ ಸಿಂಗಲೀಕಗಳ ಸಂರಕ್ಷಿತ ಪ್ರದೇಶವಾಗಿದೆ. ಈ ಯೋಜನೆಯಿಂದ ಅವುಗಳ ಆವಾಸಸ್ಥಾನದ ಮೇಲೆ ಆಗುವ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನ ಅಗತ್ಯವಿದೆ ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದ್ದು, ಈ ಅರ್ಜಿಯನ್ನು ಮುಕ್ತಾಯಗೊಳಿಸುತ್ತಿಲ್ಲ. ಮುಂದಿನ ಆದೇಶದವರೆಗೆ ಪರಿಸರ ಸೂಕ್ಷ್ಮವಲಯದ ಗಡಿಯೊಳಗೆ ಯೋಜನೆಗೆ ಸಂಬಂಧಿಸಿದೆ ಯಾವುದೇ ಚಟುವಟಿಕೆ ಕೈಗೊಳ್ಳಬಾರದು ಎಂದು ಆದೇಶಿಸಿದೆ.

