ಬೆಂಗಳೂರು: ರಾಜ್ಯ ಹೆದ್ದಾರಿ, ಜಿಲ್ಲಾ ಹೆದ್ದಾರಿಗಳಲ್ಲಿ ಹೆಚ್ಚಿನ ಸೂಚನಾ ಫಲಕ ಅಳವಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತು ಬೀದರ್ ಮೂಲದ ವಕೀಲ ಗುರುನಾಥ್ ವಡ್ಡೆ ಅವರು ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ಪೀಠದಿಂದ ಸರ್ಕಾರಕ್ಕೆ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ.
ರಾಜ್ಯ ಹೆದ್ದಾರಿ, ಜಿಲ್ಲಾ ಹೆದ್ದಾರಿ ಹಾಗೂ ಬೀದರ್ ಜಿಲ್ಲೆಯ ಅಂತರ ಗ್ರಾಮ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯಲು ಹೆಚ್ಚುವರಿ ಸೂಚನಾ ಫಲಕ ಅಳವಡಿಸಬೇಕೆನ್ನುವ ಮನವಿಯನ್ನು ಪರಿಗಣಿಸಿದ ಹೈಕೋರ್ಟ್ ಸೂಕ್ತ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಅರ್ಜಿ ವಿಚಾರಣೆಯ ವೇಳೆ ಅರ್ಜಿದಾರರ ಪರ ವಕೀಲರು, ಇತ್ತೀಚಿಗೆ ರಾಜ್ಯ, ಜಿಲ್ಲಾ ಹೆದ್ದಾರಿಗಳಲ್ಲಿ ಹೆಚ್ಚಿನ ಪ್ರಮಾಣದ ರಸ್ತೆ ಅಪಘಾತ ಸಂಭವಿಸುತ್ತಿವೆ. ಈ ಸಂಬಂಧ 2024ರಲ್ಲಿ ಸರ್ಕಾರಕ್ಕೆ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ ಎಂದು ನ್ಯಾಯ ಪೀಠಕ್ಕೆ ತಿಳಿಸಿದರು.