ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಮಕ್ಕಳು ಹಿಂಬದಿ ಸವಾರರಾಗಿ ಪ್ರಯಾಣಿಸುವಾಗ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸುವ ಕೇಂದ್ರ ಮೋಟಾರ್ ವಾಹನ ಎರಡನೇ ತಿದ್ದುಪಡಿ ಅಧಿನಿಯಮಗಳು 2022ರ 138(7)ನಿಯಮ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಬಗ್ಗೆ ಶಿವಮೊಗ್ಗದ ಡಾ. ಅರ್ಚನಾ ಭಟ್ ಸಲ್ಲಿಸಿದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠದಿಂದ ಈ ನಿರ್ದೇಶನ ನೀಡಲಾಗಿದೆ.
ಕೇಂದ್ರ ಮೋಟಾರ್ ವಾಹನ ನಿಯಮಗಳನ್ನು ಜಾರಿಗೆ ತರುವಲ್ಲಿ ರಾಜ್ಯದ ಅಧಿಕಾರಿಗಳು ಅನೇಕ ಕ್ರಮ ಕೈಗೊಂಡಿದ್ದಾರೆ. ಆದರೆ, ವಾಸ್ತವವಾಗಿ ನಿಯಮ ಇನ್ನು ಜಾರಿಯಾಗಿಲ್ಲ. ಹೀಗಾಗಿ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶಿಸಿದೆ.
