ಬೆಂಗಳೂರು: ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ವತಿಯಿಂದ ಇಂದು ಸುಮಾರು 35 ಪರಿಶಿಷ್ಟ ಜಾತಿಯ ಪ್ರತಿಭಾನ್ವಿತ ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಸ್ಪರ್ಧಿಸಲು ಅವಶ್ಯಕವಾಗಿರುವ ಹೈ ಎಂಡ್ ಸೈಕಲ್ಗಳನ್ನು ವಿತರಿಸಿದ್ದೇವೆ. ಇದರಿಂದ ಒಲಿಂಪಿಕ್ಸ್, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಿಗೆ ತರಬೇತಿ ಪಡೆಯಲು ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿಗಳು, ಕಂದಾಯ ಮತ್ತು ಕ್ರೀಡಾ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.
ಬೆಂಗಳೂರಿನ ನೃಪತುಂಗ ರಸ್ತೆಯ ಯುವನಿಕಾ ಸಭಾಂಗಣದ ಮುಂಭಾಗದಲ್ಲಿ 35 ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಹೈ ಎಂಡ್ ಸೈಕಲ್ಗಳನ್ನು ವಿತರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.
ತಲಾ ₹14 ಲಕ್ಷ ಮೌಲ್ಯದ ಸೈಕಲ್ಗಳನ್ನು ಒಬ್ಬ ಕ್ರೀಡಾಪಟುವಿಗೆ ವಿತರಿಸಿದ್ದೇವೆ. ವಿಜಯಪುರ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳ ಕ್ರೀಡಾ ವಸತಿ ನಿಲಯಗಳಲ್ಲಿ ಸೈಕ್ಲಿಂಗ್ ತರಬೇತಿ ಪಡೆಯುತ್ತಿರುವ ಕ್ರೀಡಾಪಟುಗಳಿಗೆ ಇದರಿಂದ ಅನುಕೂಲವಾಗಲಿದೆ. ಸೈಕಲ್ಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ನೀಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಪದಕಗಳನ್ನು ಗಳಿಸುವಂತೆ ತರಬೇತುದಾರರಿಗೆ ಇಲಾಖೆಯ ವತಿಯಿಂದ ಸೂಚನೆ ನೀಡಲಾಗಿದೆ ಎಂದು ಹೇಳಿದರು.

