ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಲೆನಾಡಿನ ಶಿವಮೊಗ್ಗದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಸಾಗರ ತಾಲೂಕು ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಆಗಸ್ಟ್ 3ರಂದು ಸೋಮವಾರ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಡಿಪ್ಲೊಮಾ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಡಾ. ಪ್ರತಿಭಾ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಂಜಿತ್ ಆದೇಶಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನಾದ್ಯಂತ ಭಾರಿ ಗಾಳಿ ಮಳೆ ಹಿನ್ನೆಲೆ ರಜೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಜೋಯಿಡಾಡ ಮತ್ತು ದಾಂಡೇಲಿ ತಾಲೂಕುಗಳ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಆಗಸ್ಟ್ 3 ರಂದು ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆಯ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಎರಡು ತಾಲೂಕುಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಆಗಸ್ಟ್ 3ರಂದು ಕೂಡ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ. ಮಂಗಳೂರು, ಉಳ್ಳಾಲ, ಮೂಡಬಿದರೆ, ಬಂಟ್ವಾಳ, ಮುಲ್ಕಿ ತಾಲೂಕಿನಲ್ಲಿ ಅಂಗನವಾಡಿಯಿಂದ 10ನೇ ತರಗತಿಯವರೆಗೆ ರಜೆ ಘೋಷಣೆ ಮಾಡಲಾಗಿದೆ. ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕಿನಲ್ಲಿ ಅಂಗನವಾಡಿಯಿಂದ ದ್ವಿತೀಯ ಪಿಯುಸಿ, ಐಟಿಐ ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಕೊಪ್ಪ, ಶೃಂಗೇರಿ ತಾಲೂಕಿನ ಅಂಗನವಾಡಿ ಶಾಲೆಗಳಿಗೆ ಆಗಸ್ಟ್ 3ರಂದು ರಜೆ ನೀಡಲಾಗಿದೆ. ಕೊಪ್ಪ, ಶೃಂಗೇರಿ ತಾಲೂಕುಗಳ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

