ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಹತ್ಯೆಗೈದ ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಲಗ್ಗೆರೆ ರಾಜೇಶ್ವರಿ ನಗರದಲ್ಲಿ ನಡೆದಿದೆ.
ಮೃತರನ್ನು ಪದ್ಮಾವತಿ (29) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಸುಮಂತ್ (22) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಂಪತಿ ನಡುವೆ ಮನೆ ಹಾಗೂ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಕಳೆದ ಮಧ್ಯರಾತ್ರಿ ಪತ್ನಿಯನ್ನು ಹತ್ಯೆಗೈದ ಬಳಿಕ ಸುಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದ ಸುಮಂತ್, “ನಾನು ಸಾಯುತ್ತಿದ್ದೇನೆ” ಎಂದು ತಿಳಿಸಿದ್ದಾನೆ. ಅಲ್ಲದೆ, ತನ್ನ ಪಿಎಫ್ ಹಣ ಹಾಗೂ ಇತರೆ ವಸ್ತುಗಳನ್ನು ತೆಗೆದುಕೊಂಡು ಹೋಗುವಂತೆ ಹೇಳಿದ್ದ ಎನ್ನಲಾಗಿದೆ.
ಬೆಳಗ್ಗೆ ಸಂಬಂಧಿಕರು ಮನೆಗೆ ಬಂದು ನೋಡಿದಾಗ ದಂಪತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

