ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಗುಡ್ಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ತಡರಾತ್ರಿ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಲ್ಲಿಕಾರ್ಜುನ(35), ನಾಗವೇಣಿ(28), ಸಂತೋಷ್(3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕೊಕ್ಕರೆಗಾರು ನಿವಾಸಿಗಳಾಗಿದ್ದಾರೆ. ಪಕ್ಕದ ಶೆಡ್ ನಲ್ಲಿ ಇದ್ದವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಮಧ್ಯರಾತ್ರಿ 2.30ರ ಸುಮಾರಿಗೆ ಏಕಾಏಕಿ ಗುಡ್ಡ ಕುಸಿದು ದುರಂತ ಸಂಭವಿಸಿದೆ. ಶೆಡ್ ಮೇಲೆ ಗುಡ್ಡ ಕುಸಿದು ಶೆಡ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ಮಣ್ಣಿನಡಿ ಸಿಲುಕಿದ ಶವ ಹೊರ ತೆಗೆಯಲು ಸ್ಥಳೀಯರ ನೆರವಿನಿಂದ ಕಾರ್ಯಾಚರಣೆ ನಡೆಸಿದ್ದಾರೆ.

