ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆಸರ ಓಣಿ ಪುರಷ್ಕರಿ ವಿವಾದ ತಾರಕ್ಕೇರಿದೆ. ಹಿಂದೂಪರ ಸಂಘಟನೆಗಳು ಇಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಹುಬ್ಬಳ್ಳಿಯ ಆಸರ ಓಣಿಯಲ್ಲಿ ಪುಷ್ಕರಣಿಯ ಮೇಲೆ ರಸ್ತೆ ನಿರ್ಮಾಣ ಮಾಡುವ ವಿಚಾರ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ರಸ್ತೆ ನಿರ್ಮಾಣವನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಇಂದು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ 1,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಹಿಂದೂ ಸಂಘಟನೆಗಳು ಹೇಳುವ ಪ್ರಕಾರ, ರಸ್ತೆ ನಿರ್ಮಿಸುತ್ತಿರುವ ಜಾಗದಲ್ಲಿ ಪುರಾತನ ಭವಾನಿ ಶಂಕರ ದೇವಾಲಯದ ಪುಷ್ಕರಣಿ ಇದೆ. ಪಾಲಿಕೆಯಿಂದ ಇದೇ ತಿಂಗಳು ಈ ಜಾಗದಲ್ಲಿ ರಸ್ತೆ ನಿರ್ಮಿಸುತ್ತಿರುವುದನ್ನು ಹಿಂದೂಪರ ಸಂಘಟನೆಗಳು ವಿರೋಧಿಸಿವೆ. ಅನಧಿಕೃತವಾಗಿ ರಸ್ತೆ ನಿರ್ಮಿಸಲಾಗುತ್ತಿದ್ದು, ನಿರ್ಮಿಸಿದರೆ ಅದನ್ನು ಕಿತ್ತು ಹಾಕುವುದಾಗಿ ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಆದರೆ, ರಸ್ತೆ ಕಿತ್ತು ಹಾಕಲು ಬಿಡುವುದಿಲ್ಲ ಎಂದು ದಲಿತ ಮತ್ತು ಮುಸ್ಲಿಂ ಸಂಘಟನೆಗಳು ಹೇಳಿವೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ. ಪೊಲೀಸರು ಎಲ್ಲೆಡೆ ಬೀಡುಬಿಟ್ಟಿದ್ದಾರೆ.

