ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದರಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯನ್ನು ಬಂಧಿಸಿ ಕರೆದೊಯ್ಯುವ ವೇಳೆ ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಹುಬ್ಬಳ್ಳಿ ಪ್ರಕರಣದ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದೇವೆ. ಬಿಜೆಪಿ ನಾಯಕರು ಪೊಲೀಸರನ್ನು ಅಮಾನತುಗೊಳಿಸುವಂತೆ ಹೇಳುತ್ತಿದ್ದಾರೆ. ಆದರೆ ಪ್ರಕರಣದಲ್ಲಿ ಸುಜಾತಾ ಹಂಡಿ ಅವರದ್ದೇ ತಪ್ಪಿದೆ ಎನ್ನಲಾಗುತ್ತಿದೆ. ಹಾಗಾಗಿ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದರು.
ಸಿಐಡಿ ತನಿಖೆ ನಡೆದರೆ ಸತ್ಯಾಸತ್ಯತೆ ಗೊತ್ತಾಗುತ್ತದೆ, ಯಾರ ತಪ್ಪಿದೆ ಅಂತಾ ತಿಳಿಯಲಿದೆ. ಬಿಜೆಪಿಯವರು ಒಂದು ಹೇಳುತ್ತಾರೆ. ನಮ್ಮವರು ಒಂದು ಹೇಳುತ್ತಾರೆ. ಎಲ್ಲವೂ ತನಿಖೆಯಿಂದ ಗೊತ್ತಾಗಲಿದೆ ಎಂದು ತಿಳಿಸಿದರು.

