ಬೆಂಗಳೂರು: ಉದ್ದೇಶಿತ ಹೈಟೆಕ್ ಡಿಫೆನ್ಸ್ ಮತ್ತು ಏರೋ ಸ್ಪೇಸ್ ಪಾರ್ಕ್ ಅಭಿವೃದ್ಧಿಗೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಭೂಸ್ವಾಧೀನ ವಿರೋಧಿಸುತ್ತಿರುವ ರೈತರ ಮನವೊಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಇಂದು ರೈತರೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ.
ಹೈಟೆಕ್ ಡಿಫೆನ್ಸ್ ಮತ್ತು ಏರೋ ಸ್ಪೇಸ್ ಪಾರ್ಕ್ ಅಭಿವೃದ್ಧಿಗೆ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು 2021ರ ಆಗಸ್ಟ್ 27ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿ 2022ರ ಫೆಬ್ರವರಿ 15 ರಂದು ಆದೇಶಿಸಲಾಗಿದೆ. ಈ ಭೂಸ್ವಾಧೀನಕ್ಕೆ ರೈತರಿಂದ ವಿರೋಧ ವ್ಯಕ್ತವಾಗಿ ಹೋರಾಟ ಕೈಗೊಂಡಿದ್ದಾರೆ.
ವಿರೋಧದ ಬಳಿಕ 495 ಎಕರೆ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಸರ್ಕಾರ ನಿರ್ಧರಿಸಿದೆ. ಉಳಿದ 10 ಗ್ರಾಮಗಳ ರೈತರು ಕೂಡ ಭೂಸ್ವಾಧೀನ ಕೈಬಿಡಲು ಹೋರಾಟ ಮುಂದುವರೆಸಿದ್ದಾರೆ.
ರೈತರ ಮನವೊಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ಗುರುವಾರ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಕೆ.ಹೆಚ್. ಮುನಿಯಪ್ಪ ಸೇರಿದಂತೆ ಹಲವು ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಹೊಸ ಕಾಯ್ದೆ ಅನ್ವಯ ಸೂಕ್ತ ಪರಿಹಾರ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.