ಹೈದರಾಬಾದ್: ತೆಲಂಗಾಣದ ಔಷಧ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ತೆಲಂಗಾಣದ ಯಾದಾದ್ರಿ-ಭುವನಗಿರಿ ಜಿಲ್ಲೆಯ ಪೊಚಂಪಲ್ಲಿ ಮಂಡಲದ ದೋತಿಗುಡೆಂ ಗ್ರಾಮದ ಹೊರವಲಯದಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ಹ್ಯಾಜೆಲೋ ಲ್ಯಾಬ್ ಪ್ರೈ.ಲಿ ಕಂಪನಿಯ ಔಷಧ ಘಟಕದಲ್ಲಿ ಸ್ಫೋತ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 9 ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನುಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಸ್ಫೋಟದ ಬಳಿಕ ಕಂಪನಿಯ ಆವರಣದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದಲ್ಲದೇ, ಸುತ್ತಮುತ್ತಲು ದಟ್ಟ ಹೊಗೆ ಆವರಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಇ ನಂದಿಸಲು ಹರಸಾಹಸಪಟ್ಟಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಫಾರ್ಮಾ ಕಂಪನಿಯಲ್ಲಿದ್ದ ರಿಯಾಕ್ಟರ್ ಸ್ಫೋಟಗೊಂಡಿರುವ ಸಾಧ್ಯತೆಯಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸ್ಫೋಟಕ್ಕೆ ನಿಖರವಾಗಿ ಕಾರಣ ತಿಳಿದುಬಂದಿಲ್ಲ.

