ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ವಿಚಾರವನ್ನು ಮತ್ತೆ ಪ್ರಸ್ತಾಪಿಸುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ರಾಜಕೀಯ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯ ನಾಯಕನೊಂದಿಗಿನ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು, ತಾನು ಪ್ರಧಾನಿ ಮೋದಿಗಿಂತ ಹೆಚ್ಚು ವಿದ್ಯಾರ್ಹತೆ ಹೊಂದಿದ್ದು, ಉತ್ತಮವಾಗಿ ಇಂಗ್ಲಿಷ್ ಮಾತನಾಡಬಲ್ಲೆ ಎಂದು ಹೇಳಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಹಾಗೂ ಶೈಕ್ಷಣಿಕ ಅರ್ಹತೆಯ ವಿಚಾರವನ್ನು ಮುಂದಿಟ್ಟುಕೊಂಡು ಪ್ರಿಯಾಂಕ್ ಖರ್ಗೆ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಛಲವಾದಿ ನಾರಾಯಣಸ್ವಾಮಿ ವಿರುದ್ಧ ವಾಗ್ದಾಳಿ
ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಿಯಾಂಕ್ ಖರ್ಗೆ ಅವರ ಶೈಕ್ಷಣಿಕ ಹಿನ್ನೆಲೆಯನ್ನು ಪ್ರಶ್ನಿಸಿ ಟೀಕೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಖರ್ಗೆ, ತಮ್ಮ ಶಿಕ್ಷಣದ ಬಗ್ಗೆ ಪ್ರಶ್ನಿಸುವವರು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆಯೂ ಮಾತನಾಡಬೇಕು ಎಂಬ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ತಾವು ಬೆಂಗಳೂರಿನ ಅದಮಾರು ಮಠದ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿರುವುದಾಗಿ ತಿಳಿಸಿದ ಅವರು, ತಮ್ಮನ್ನು ‘ಕಾನ್ವೆಂಟ್ ದಲಿತ’ ಎಂದು ಟೀಕಿಸುವವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವುದೇ ಭಾಷೆಯಲ್ಲಿ ಹಾಗೂ ಯಾವುದೇ ವಿಷಯದ ಕುರಿತು ಚರ್ಚೆ ನಡೆಸಲು ತಾವು ಸಿದ್ಧವಿದ್ದು, ಬಹಿರಂಗ ಚರ್ಚೆಗೆ ಬರುವಂತೆ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ.
ಈ ಹೇಳಿಕೆಯ ಮೂಲಕ ರಾಜ್ಯ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಶಿಕ್ಷಣ, ಭಾಷಾ ಜ್ಞಾನ ಹಾಗೂ ರಾಜಕೀಯ ನಾಯಕರ ಅರ್ಹತೆಗಳ ವಿಚಾರ ಇದೀಗ ಮತ್ತೊಮ್ಮೆ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ.
ಕೆಇಎ ಮೂಲಕ ಕಲ್ಯಾಣ ಕರ್ನಾಟಕ ಖಾಲಿ ಹುದ್ದೆಗಳ ಭರ್ತಿ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಈ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನ್ಯಾಯಯುತ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸಂವಿಧಾನದ 371(ಜೆ) ವಿಧಿಯನ್ನು ಜಾರಿಗೆ ತರಲಾಗಿದೆ. ಈ ಮಹತ್ವದ ಸಂವಿಧಾನಾತ್ಮಕ ಆಶಯವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವಿಳಂಬ ನೀತಿ ತೋರಬಾರದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ಹಾಗೂ ಸಂವಿಧಾನದ 371(ಜೆ) ವಿಧಿಯ ಅನುಷ್ಠಾನ ಕುರಿತ ಉಪಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕದ ಜನರು ಈ ಕಾಯ್ದೆಯಡಿ ಶಿಕ್ಷಣ, ಉದ್ಯೋಗ ಸೇರಿದಂತೆ ತಮಗೆ ದೊರೆಯಬೇಕಾದ ಸೌಲಭ್ಯಗಳನ್ನು ಅಧಿಕಾರಯುತವಾಗಿ ಕೇಳುತ್ತಿದ್ದಾರೆಯೇ ಹೊರತು ಯಾರ ಬಳಿಯೂ ಭಿಕ್ಷೆ ಬೇಡುತ್ತಿಲ್ಲ. ಇದು ಸಂವಿಧಾನವೇ ನೀಡಿರುವ ಅವರ ಹಕ್ಕು, ಹೀಗಾಗಿ, 371(ಜೆ) ವಿಧಿಯ ಅನುಷ್ಠಾನವನ್ನು ಅಧಿಕಾರಿಗಳು ಹಗುರವಾಗಿ ಪರಿಗಣಿಸದೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಗಿರಿಸಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಆದ್ಯತೆ ಮೇರೆಗೆ ಭರ್ತಿ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ವೇಗ ನೀಡುವುದರ ಜತೆಗೆ, 371(ಜೆ) ಅಡಿಯಲ್ಲಿ ಈ ಭಾಗದ ಜನರಿಗೆ ದೊರೆಯಬೇಕಾದ ಸಾಂವಿಧಾನಿಕ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಸಭೆಯಲ್ಲಿ ನೀಡುವ ನಿರ್ದೇಶನಗಳು ಕೇವಲ ದಾಖಲೆಗಳಿಗೆ ಸೀಮಿತವಾಗಬಾರದು. ಅವುಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸಿ, ಮುಂದಿನ ಸಭೆಯಲ್ಲಿ ಸಾಧಿಸಿರುವ ಪ್ರಗತಿಯ ಸ್ಪಷ್ಟ ಅಂಕಿ-ಅಂಶಗಳನ್ನು ಸಲ್ಲಿಸಬೇಕು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳಲ್ಲಿ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.

