ಬಿರುಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕದ ವಿವಿಧ ಜಿಲ್ಲೆಗಳ ಜನರಿಗೆ ಸಂತಸದ ಸುದ್ದಿಯೊಂದಿದೆ. ಮಾರ್ಚ್ 15 ರಿಂದ 18ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬಿಸಿಲು ನೆತ್ತಿ ಸುಡುತ್ತಿದ್ದು, ಜನರು ಮಾರ್ಚ್ ತಿಂಗಳಿನಲ್ಲಿಯೇ ಬೇಸಿಗೆಗೆ ಹೈರಾಣಾಗಿ ಹೋಗಿದ್ದಾರೆ.
ಲಕ್ಷದ್ವೀಪ ಮತ್ತು ಕೊಮೊರಿಯನ್ ಪ್ರದೇಶದಲ್ಲಿ ವಾಯು ಚಂಡಮಾರುತ ಪರಿಚಲನೆ ಮತ್ತು ಮನ್ನಾರ್ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಆದರೆ ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದೆ. ಮಾರ್ಚ್ 14ರಂದು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾವ-ಯಾವ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಬದಲಾವಣೆ ಕಾರಣ ಬೇಸಿಗೆಯಲ್ಲಿ ಮೂರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆದರೆ ಈ ಬಾರಿಯ ಬೇಸಿಗೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಅಂದಾಜಿಸಿದ್ದಾರೆ.
ಮಾರ್ಚ್ 15ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ಮಾರ್ಚ್ 16ರಂದು ಕರಾವಳಿಯ ಎಲ್ಲಾ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಾರ್ಚ್ 17ರಂದು ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ, ಧಾರವಾಡ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಾರ್ಚ್ 18ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಈ ಬಾರಿ ಬೇಸಿಗೆಯಲ್ಲಿ ವಾಡಿಕೆಗಿಂತ ಅಧಿಕ ಬಿಸಿಲು ಇರಲಿದ್ದು, ತಾಪಮಾನ 3-4 ಡಿಗ್ರಿ ತನಕ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇಂತಹ ಸಮಯದಲ್ಲಿ ಮಳೆ ಸುರಿಯುವ ನಿರೀಕ್ಷೆ ಇರುವುದು ಸಂತಸದ ಸುದ್ದಿಯಾಗಿದೆ.

