HomeLatest Newsಟಿ20 ವಿಶ್ವಕಪ್‌ ಇತಿಹಾಸದಲ್ಲಿ ಭಾರತ 150+ ಚೇಸ್ ಮಾಡಿದ್ದು ಕೇವಲ 4 ಬಾರಿ: 3 ಬಾರಿ...

ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಭಾರತ 150+ ಚೇಸ್ ಮಾಡಿದ್ದು ಕೇವಲ 4 ಬಾರಿ: 3 ಬಾರಿ ಗೆಲ್ಲಿಸಿದ್ದು ಆತ, ಈ ಬಾರಿ ಸಂಜು ಸ್ಯಾಮ್ಸನ್!

ನಿನ್ನೆ ( ಮಾರ್ಚ್ 1 ) ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ವೆಸ್ಟ್ ಇಂಡೀಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಕಂಡು ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಭಾರತ ಮಾರ್ಚ್ 5ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಾಟ ನಡೆಸಲಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಆರಿಸಿಕೊಂಡು ವೆಸ್ಟ್ ಇಂಡೀಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ವೆಸ್ಟ್ ಇಂಡೀಸ್ ಬ್ಯಾಟಿಂಗ್ ವಿಭಾಗದ ಉತ್ತಮ ಆಟದಿಂದಾಗಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಕಲೆಹಾಕಿ ಭಾರತಕ್ಕೆ 196 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 19.2 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 199 ರನ್ ಕಲೆಹಾಕಿತು.

ಈ ಮೂಲಕ ಭಾರತ ನಾಲ್ಕನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ 150ಕ್ಕಿಂತ ಹೆಚ್ಚಿನ ಟಾರ್ಗೆಟ್ ಚೇಸ್ ಮಾಡಿದ ಸಾಧನೆ ಮಾಡಿದೆ. ತಂಡದ ಪರ 50 ಎಸೆತಗಳಲ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 97 ರನ್ ಸಿಡಿಸಿದ ಸಂಜು ಸ್ಯಾಮ್ಸನ್ ಗೆಲುವಿನ ರೂವಾರಿಯಾದರು. ಈ ಮೂಲಕ ಕಿಂಗ್ ಕೊಹ್ಲಿಯನ್ನೊಮ್ಮೆ ನೆನಪಿಸಿಬಿಟ್ಟರು. ಹೌದು, ಈ ಪಂದ್ಯಕ್ಕೂ ಮುನ್ನ ಮೂರು ಬಾರಿ ಈ ಸಾಧನೆ ಮಾಡಿದ್ದ ಭಾರತ ತಂಡಕ್ಕೆ ಆ ಎಲ್ಲ ಪಂದ್ಯದಲ್ಲೂ ಅಜೇಯನಾಗಿ ಉಳಿದು ಆಧಾರವಾಗಿದ್ದದ್ದು ವಿರಾಟ್ ಕೊಹ್ಲಿ. ಈ ಸಾಧನೆಯ ಕುರಿತ ಮಾಹಿತಿ ಮುಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2014ರ ಸೆಮಿಫೈನಲ್ ಪಂದ್ಯ: ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿ ಭಾರತಕ್ಕೆ 173 ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ 19.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿತ್ತು. ವಿರಾಟ್ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಿ 44 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 72 ರನ್ ಚಚ್ಚಿದರು.

2016ರ ಸೂಪರ್ 10 ಪಂದ್ಯ: ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಕಲೆಹಾಕಿ ಭಾರತಕ್ಕೆ 161 ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 19.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 161 ರನ್ ಬಾರಿಸಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 51 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 82 ರನ್ ಬಾರಿಸಿದ್ದರು.

2022ರ ಸೂಪರ್ 12 ಪಂದ್ಯ: ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ 8 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿ ಭಾರತಕ್ಕೆ 160 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ್ದ ಭಾರತ ಕೇವಲ 31 ರನ್‌ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಬಹುತೇಕರು ಭಾರತಕ್ಕೆ ಸೋಲು ಖಚಿತ ಎಂದು ಭವಿಷ್ಯ ನುಡಿದಿದ್ದರು. ಆದರೆ ಕಣದಲ್ಲಿದ್ದ ಚೇಸ್ ಮಾಸ್ಟರ್ ಕೊಹ್ಲಿ ವಿನ್ ಪ್ರೆಡಿಕ್ಟರ್‌ ಉಲ್ಟಾ ಮಾಡಿದ್ದರು. ತಂಡ ಕುಸಿತ ಕಂಡರೂ ನೆಲಕಚ್ಚಿ ನಿಂತ ಕೊಹ್ಲಿ 53 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 82 ರನ್ ಚಚ್ಚಿದ್ದರು.

2026ರ ಸೂಪರ್ 8 ಪಂದ್ಯ: ನಿನ್ನೆ ನಡೆದ ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ವಿರಾಟ್ ಕೊಹ್ಲಿ ರೀತಿಯೇ ಅಜೇಯ 97 ರನ್ ಕಲೆಹಾಕಿ ಅಬ್ಬರಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಬಳಿಕ ಭಾರತ ತಂಡವನ್ನು ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ 150+ ರನ್ ಚೇಸ್ ಮಾಡಿ ಗೆಲ್ಲಿಸಿದ ಎರಡನೇ ಆಟಗಾರ ಎಂಬ ಬೃಹತ್ ಸಾಧನೆ ಮಾಡಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular