ಬೆಂಗಳೂರು: ರಾಜ್ಯದ ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಬಾಂಬ್ ಇಟ್ಟು ಸ್ಫೋಟಿಸಿದ್ದೇನೆ ಎಂದು ಹೇಳುವ ರೀತಿಯಲ್ಲಿ ಎಐ ವಿಡಿಯೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿರುವ ಘಟನೆ ವ್ಯಾಪಕ ಟೀಕೆಗೆ ಕಾರಣವಾಗಿದೆ. jnx king hg ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಕೆಲವೇ ಗಂಟೆಗಳ ಹಿಂದೆ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ ಎನ್ನಲಾಗಿದೆ.
ವಿಧಾನಸೌಧದ ಮೇಲೆ ಗುಂಡಿನ ದಾಳಿ ನಡೆಸಿ, ಬಳಿಕ ಸ್ಫೋಟ ಸಂಭವಿಸಿದಂತೆ ಕಾಣುವ ರೀತಿಯಲ್ಲಿ ವಿಡಿಯೋವನ್ನು ಎಡಿಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಪೋಸ್ಟ್ ಮಾಡಿರುವ ವ್ಯಕ್ತಿಯ ಉದ್ದೇಶವೇನು ಎಂಬ ಪ್ರಶ್ನೆಗಳು ಎದ್ದಿವೆ.
500ಕ್ಕೂ ಹೆಚ್ಚು ಕಾಮೆಂಟ್ಗಳು!
ವಿಡಿಯೋಗೆ 500ಕ್ಕೂ ಹೆಚ್ಚು ಕಾಮೆಂಟ್ಗಳು ಬಂದಿವೆ ಎನ್ನಲಾಗಿದ್ದು, ಅನೇಕ ನೆಟ್ಟಿಗರು ಈ ರೀತಿಯ ವಿಡಿಯೋಗಳನ್ನು ಪೋಸ್ಟ್ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಲವರು ವಿಡಿಯೋವನ್ನು ಡಿಲೀಟ್ ಮಾಡುವಂತೆ ಒತ್ತಾಯಿಸಿದ್ದು, ಬೆಂಗಳೂರು ಪೊಲೀಸರನ್ನೂ ಟ್ಯಾಗ್ ಮಾಡಿದ್ದಾರೆ.
ಪೊಲೀಸರಿಂದ ಕ್ರಮಕ್ಕೆ ಮುಂದಾದರೇ?
ವಿಧಾನಸೌಧದಂತಹ ಪ್ರಮುಖ ಸರ್ಕಾರಿ ಕಟ್ಟಡದ ಕುರಿತು ಇಂತಹ ವಿಡಿಯೋ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ವಿಡಿಯೋ ಅಪ್ಲೋಡ್ ಮಾಡಿದ ವ್ಯಕ್ತಿಯ ಗುರುತು, ಪೋಸ್ಟ್ ಹಿಂದಿನ ಉದ್ದೇಶ ಮತ್ತು ಅದರ ಸತ್ಯಾಸತ್ಯತೆ ಕುರಿತು ಪ್ರಶ್ನೆಗಳು ಮೂಡಿವೆ. ಸಂಬಂಧಪಟ್ಟ ವ್ಯಕ್ತಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಎಚ್ಚರಿಕೆ
ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಣೆ ಮತ್ತು ಜನಪ್ರಿಯತೆಗಾಗಿ ಅಪಾಯಕಾರಿ ಅಥವಾ ಬೆದರಿಕೆಯ ರೀತಿಯ ಕಂಟೆಂಟ್ಗಳನ್ನು ಸೃಷ್ಟಿಸಿ ಹಂಚಿಕೊಳ್ಳುವುದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಎಐ ತಂತ್ರಜ್ಞಾನ ಬಳಸಿ ವಿಡಿಯೋಗಳನ್ನು ರಚಿಸಿದರೂ, ಅವು ಸಾರ್ವಜನಿಕರಲ್ಲಿ ಆತಂಕ ಮೂಡಿಸುವಂತಿದ್ದರೆ ಜವಾಬ್ದಾರಿಯಿಂದ ವರ್ತಿಸುವುದು ಅಗತ್ಯ.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಧಾರವಾಡ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ
ಧಾರವಾಡ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಅಕ್ಟೋಬರ್ 21ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 23ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ, ಮದ್ಯಪಾನ ಹಾಗೂ ಮದ್ಯ ಸಾಗಣೆ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸ್ನೇಹಲ್ ಆರ್. ಅವರು ಆದೇಶ ಹೊರಡಿಸಿದ್ದಾರೆ.
ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ. ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135(ಸಿ) ಹಾಗೂ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಅವಧಿಯಲ್ಲಿ ಮದ್ಯ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಲಾಗಿದೆ.
ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಅದರಂತೆ, ನಿಗದಿತ ಅವಧಿಯಲ್ಲಿ ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಭಾರತೀಯ ನಿರ್ಮಿತ ವಿದೇಶಿ ಮದ್ಯದ (IMFL) ಅಂಗಡಿಗಳು, ಬಿಯರ್ ಬಾರ್ಗಳು, ಕ್ಲಬ್ಗಳು, ಮದ್ಯದ ಡಿಪೋಗಳು ಹಾಗೂ ಮದ್ಯ ಮಾರಾಟ ಮಾಡುವ ಇತರ ಸ್ಥಳಗಳನ್ನು ಮುಚ್ಚಬೇಕು. ಈ ಅವಧಿಯಲ್ಲಿ ಮದ್ಯ ಮಾರಾಟ, ಮದ್ಯಪಾನ ಮತ್ತು ಮದ್ಯ ಸಾಗಣೆಗೆ ಅವಕಾಶವಿರುವುದಿಲ್ಲ.
ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅಗತ್ಯವಿದ್ದಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ, 1965ರ ಕಲಂ 21(2)ರ ಅನ್ವಯ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಬಕಾರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ ಆದೇಶ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಕ್ರಮ ಕೈಗೊಳ್ಳಲು ಅಬಕಾರಿ ಉಪ ಆಯುಕ್ತರು, ಅಬಕಾರಿ ಅಧೀಕ್ಷಕರು, ಹೆಚ್ಚುವರಿ ಅಬಕಾರಿ ಅಧೀಕ್ಷಕರು ಹಾಗೂ ಹುಬ್ಬಳ್ಳಿಯ ಅಬಕಾರಿ ಉಪ ಅಧೀಕ್ಷಕರು (ವಿಚಕ್ಷಣ ದಳ) ಅವರಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ನಿರ್ದೇಶನ ನೀಡಿದ್ದಾರೆ.

