ತುಂಗಭದ್ರಾ ಜಲಾಶಯದ ಎಲ್ಲ 33 ಕ್ರೆಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಮೇ ಅಂತ್ಯದೊಳಗೆ ಪೂರ್ಣಗೊಳಿಸಿ, ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.
ಶುಕ್ರವಾರ ತುಂಗಭದ್ರಾ ಜಲಾಶಯದ ಮೇಲ್ಭಾಗಕ್ಕೆ ಭೇಟಿ ನೀಡಿ, ಕ್ರೆಸ್ಟ್ ಗೇಟ್ ಅಳವಡಿಕೆ ಕಾಮಗಾರಿಯನ್ನು ಖುದ್ದಾಗಿ ವೀಕ್ಷಿಸಿದ ಸಚಿವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈಗಾಗಲೇ 18 ನೂತನ ಕ್ರೆಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ಇನ್ನೂ 5 ಗೇಟ್ ಗಳ ಕೆಲಸ ಪ್ರಗತಿಯಲ್ಲಿದೆ. ಮಾರ್ಚ್ ಅಂತ್ಯದೊಳಗೆ ಒಟ್ಟು 23 ಗೇಟ್‌ಗಳ ಅಳವಡಿಕೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಏಪ್ರಿಲ್ ತಿಂಗಳಲ್ಲಿ ಉಳಿದ 10 ಗೇಟ್‌ಗಳನ್ನು ಅಳವಡಿಸುವ ಮೂಲಕ, ಮೇ ಅಂತ್ಯದೊಳಗೆ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

