ಡೆಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಲೀಗ್ ಹಂತದ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 210 ರನ್ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 211 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.
ಗುಜರಾತ್ ಟೈಟನ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ ಕೇವಲ 12 ರನ್ ಗಳಿಸಿದರೆ, ಆರಂಭದಲ್ಲಿ ನಿಧಾನಗತಿ ಬ್ಯಾಟಿಂಗ್ ಮಾಡಿ ಬಳಿಕ ಬಿರುಸಾದ ಬ್ಯಾಟಿಂಗ್ ನಡೆಸಿದ ಶುಬ್‌ಮನ್ ಗಿಲ್ 45 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 70 ರನ್ ಬಾರಿಸಿದರು. ಇನ್ನುಳಿದಂತೆ ಜೋಶ್ ಬಟ್ಲರ್ 27 ಎಸೆತಗಳಲ್ಲಿ 3 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 52 ರನ್ ಚಚ್ಚಿದರು. ವಾಷಿಂಗ್ಟನ್ ಸುಂದರ್ 32 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 55 ರನ್ ಬಾರಿಸಿ ಐಪಿಎಲ್‌ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಸಾಧನೆ ಮಾಡಿದರು. ಗ್ಲೆನ್ ಫಿಲಿಪ್ಸ್ ಅಜೇಯ 14 ರನ್ ಹಾಗೂ ರಾಹುಲ್ ತೆವಾಟಿಯಾ ಅಜೇಯ 1 ರನ್ ಗಳಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಮುಕೇಶ್ ಕುಮಾರ್ ಎರಡು ವಿಕೆಟ್, ಲುಂಗಿ ಎನ್‌ಗಿಡಿ ಹಾಗೂ ಕುಲ್‌ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

