ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಂದು ( ಏಪ್ರಿಲ್ 16 ) ಐಪಿಎಲ್ 2026ರ ಲೀಗ್ ಹಂತದ 24ನೇ ಪಂದ್ಯ ನಡೆಯುತ್ತಿದ್ದು, ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಐಯ್ಯರ್ ಬೌಲಿಂಗ್ ಆರಿಸಿಕೊಂಡಿದ್ದು, ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮುಂಬೈ ಇಂಡಿಯನ್ಸ್ ಕ್ವಿಂಟನ್ ಡಿ ಕಾಕ್ ಅಬ್ಬರದ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಕಲೆಹಾಕಿ ಪಂಜಾಬ್ ಕಿಂಗ್ಸ್‌ಗೆ 196 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.
ಮುಂಬೈ ಇಂಡಿಯನ್ಸ್ ಪರ ಆರಂಭಿಕರಾಗಿ ರಯಾನ್ ರಿಕೆಲ್ಟನ್ ಹಾಗೂ ಕ್ವಿಂಟನ್ ಡಿ ಕಾಕ್ ಕಣಕ್ಕಿಳಿದರು. ರಯನಾ ರಿಕೆಲ್ಟನ್ ಕೇವಲ 2 ರನ್‌ಗೆ ವಿಕೆಟ್ ಒಪ್ಪಿಸಿದರು. ಬೆನ್ನಲ್ಲೇ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಡಕ್‌ಔಟ್ ಆದರು. ಹೀಗೆ ಕೇವಲ 12 ರನ್‌ಗೆ ತನ್ನ ಮೊದಲ ಎರಡು ವಿಕೆಟ್ ಕಳೆದುಕೊಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೂರನೇ ವಿಕೆಟ್‌ಗೆ ಜತೆಯಾದ ಡಿ ಕಾಕ್ ಹಾಗೂ ನಮನ್ ಧೀರ್ 122 ರನ್‌ಗಳ ಜತೆಯಾಟವಾಡುವ ಮೂಲಕ ಆಸರೆಯಾದರು. ನಮನ್ ಧೀರ್ 31 ಎಸೆತಗಳಲ್ಲಿ 50 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 14 ರನ್ ಗಳಿಸಿ ಔಟ್ ಆದರು. ಬೆನ್ನಲ್ಲೇ ಶೆರ್ಫೆನ್ ರುದರ್‌ಫೋರ್ಡ್ 1 ಹಾಗೂ ತಿಲಕ್ ವರ್ಮಾ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಆರಂಭದಿಂದ ಕೊನೆಯ ಎಸೆತದವರೆಗೂ ಕಣದಲ್ಲಿದ್ದು ಹೋರಾಡಿ ತಮ್ಮ ಮೂರನೇ ಐಪಿಎಲ್ ಶತಕ ಬಾರಿಸಿದ ಡಿ ಕಾಕ್ 60 ಎಸೆತಗಳಲ್ಲಿ 8 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ ಅಜೇಯ 112 ರನ್ ಚಚ್ಚಿದರು.
ಪಂಜಾಬ್ ಕಿಂಗ್ಸ್ ಪರ ಅರ್ಶ್‌ದೀಪ್ ಸಿಂಗ್ ಮೂರು ವಿಕೆಟ್, ಮಾರ್ಕೊ ಯಾನ್ಸೆನ್ ಹಾಗೂ ಶಶಾಂಕ್ ಸಿಂಗ್ ತಲಾ ಒಂದೊಂದು ವಿಕೆಟ್ ಪಡೆದರು.

