ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಲೀಗ್ ಹಂತದ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಆಘಾತ ಅನುಭವಿಸಿ ನಾಯಕ ರಜತ್ ಪಟಿದಾರ್ ಅರ್ಧಶತಕ, ಶೆಫರ್ಡ್ ಹಾಗೂ ವೆಂಕಟೇಶ್ ಐಯ್ಯರ್ ಉತ್ತಮ ಆಟದ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 202 ರನ್‌ಗಳ ಸವಾಲಿನ ಗುರಿ ನೀಡಿದೆ.
ಆರ್‌ಸಿಬಿ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದರು. ಜೋಫ್ರಾ ಆರ್ಚರ್ ಎಸೆದ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಫಿಲ್ ಸಾಲ್ಟ್ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು. ಹೀಗೆ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ ಆರ್‌ಸಿಬಿ ಪರ ಎರಡನೇ ವಿಕೆಟ್‌ಗೆ ಜತೆಯಾದ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ 45 ರನ್‌ಗಳ ಜತೆಯಾಟವನ್ನಾಡಿದರು. ಪಡಿಕ್ಕಲ್ 7 ಎಸೆತಗಳಲ್ಲಿ 14 ರನ್ ಗಳಿಸಿದರು. ಬೆನ್ನಲ್ಲೇ ಕೊಹ್ಲಿ 16 ಎಸೆತಗಳಲ್ಲಿ 32 ರನ್ ಗಳಿಸಿ ರವಿ ಬಿಷ್ಣೋಯಿಗೆ ಕ್ಲೀನ್ ಬೌಲ್ಡ್ ಆದರು. ನಂತರ ಕೃನಾಲ್ ಪಾಂಡ್ಯ ಕೇವಲ 1 ರನ್‌ಗೆ ವಿಕೆಟ್ ಒಪ್ಪಿಸಿದರು. ಬಳಿಕ ಜಿತೇಶ್ ಶರ್ಮಾ 5 ಹಾಗೂ ಟಿಮ್ ಡೇವಿಡ್ 13 ರನ್‌ಗೆ ಔಟ್ ಆದರು. ನಂತರ ಕಣಕ್ಕಿಳಿದ ರೊಮಾರಿಯೊ ಶೆಫರ್ಡ್ 11 ಎಸೆತಗಳಲ್ಲಿ 22 ರನ್ ಗಳಿಸಿದರಾದರೂ ಹೆಚ್ಚುಕಾಲ ಕಣದಲ್ಲಿ ಉಳಿಯಲಿಲ್ಲ. ಹೀಗೆ 127 ರನ್‌ಗೆ 7 ವಿಕೆಟ್ ಕಳೆದುಕೊಂಡಿತು. ಹೀಗೆ ಒಂದೆಡೆ ವಿಕೆಟ್ ಬೀಳುತ್ತಿದ್ದರೆ ಮತ್ತೊಂದೆಡೆ ನಾಯಕ ರಜತ್ ಪಟಿದಾರ್ ಏಕಾಂಗಿ ಹೋರಾಟ ನಡೆಸಿದರು. ಈ ಸಮಯದಲ್ಲಿ ಪಟಿದಾರ್ ಜತೆ ಮತ್ತೊಬ್ಬ ಬ್ಯಾಟಿಂಗ್ ಸಾಮರ್ಥ್ಯವಿರುವ ಆಟಗಾರ ಬೇಕೆಂದು ವೆಂಕಟೇಶ್ ಐಯ್ಯರ್‌ರನ್ನು ಕರೆತರಲಾಯಿತು. ಕೆಲ ಸಮಯದಲ್ಲೇ ರಜತ್ ಪಟಿದಾರ್ 40 ಎಸೆತಗಳಲ್ಲಿ 63 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಕೊನೆಯ ಹಂತದಲ್ಲಿ ಜವಾಬ್ದಾರಿಯುತ ಆಟವಾಡಿದ ವೆಂಕಟೇಶ್ ಐಯ್ಯರ್ 15 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 29 ರನ್ ಹಾಗೂ ಭುವನೇಶ್ವರ್ ಕುಮಾರ್ ಅಜೇಯ 9 ರನ್ ಕಲೆಹಾಕಿದರು.
ರಾಜಸ್ಥಾನ್ ರಾಯಲ್ಸ್ ಪರ ಜೋಫ್ರಾ ಆರ್ಚರ್, ರವಿ ಬಿಷ್ಣೋಯಿ ಹಾಗೂ ಬ್ರಿಜೇಶ್ ಶರ್ಮಾ ತಲಾ ಎರಡು ವಿಕೆಟ್ ಪಡೆದರೆ, ಸಂದೀಪ್ ಶರ್ಮಾ ಹಾಗೂ ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದರು.

