ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ಐಪಿಎಲ್ 2026ರ 13ನೇ ಲೀಗ್ ಪಂದ್ಯ ನಡೆಯುತ್ತಿದ್ದು, ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಮಳೆಯಿಂದಾಗಿ ಪಂದ್ಯ ತಡವಾಗಿ ಆರಂಭಗೊಂಡ ಕಾರಣ 11 ಓವರ್‌ಗಳ ಆಟ ಆಯೋಜನೆಯಾಗಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆರಿಸಿಕೊಂಡು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು.
ಅದರಂತೆ ರಾಜಸ್ಥಾನ್ ರಾಯಲ್ಸ್ ಯಶಸ್ವಿ ಜೈಸ್ವಾಲ್ ಅರ್ಧಶತಕ ಹಾಗೂ ವೈಭವ್ ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್ ನೆರವಿನಿಂದ 11 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 150 ರನ್ ಬಾರಿಸಿ ಮುಂಬೈ ಇಂಡಿಯನ್ಸ್ ತಂಡಕ್ಕೆ 151 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.
ರಾಜಸ್ಥಾನ್ ರಾಯಲ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ 30 ಎಸೆತಗಳಲ್ಲಿ 80 ರನ್ ಚಚ್ಚಿ ಅಬ್ಬರದ ಆರಂಭ ನೀಡಿದರು. ವೈಭವ್ ಸೂರ್ಯವಂಶಿ 14 ಎಸೆತಗಳಲ್ಲಿ 1 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 39 ರನ್ ಚಚ್ಚಿದರೆ, ಜೈಸ್ವಾಲ್ ಅಂತಿಮ ಹಂತದವರೆಗೂ ಕಣದಲ್ಲಿದ್ದು, 32 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 77 ರನ್ ಬಾರಿಸಿದರು. ಇನ್ನುಳಿದಂತೆ ಧ್ರುವ್ ಜುರೆಲ್ 2, ನಾಯಕ ರಿಯಾನ್ ಪರಾಗ್ 20 (10), ಶಿಮ್ರಾನ್ ಹೆಟ್ಮಾಯೆರ್ 7 ಎಸೆತಗಳಲ್ಲಿ ಅಜೇಯ 6 ರನ್ ಕಲೆಹಾಕಿದರು.
ಮುಂಬೈ ಇಂಡಿಯನ್ಸ್ ಪರ ಎಎಂ ಘನಜ್ಫರ್ ಎರಡು ವಿಕೆಟ್ ಹಾಗೂ ಶಾರ್ದೂಲ್ ಠಾಕೂರ್ ಒಂದು ವಿಕೆಟ್ ಪಡೆದರು.

