ಇಂದು ( ಮಾರ್ಚ್ 28 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಟಿದಾರ್ ಬೌಲಿಂಗ್ ಆರಿಸಿಕೊಂಡು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇನ್ನು ಕಳೆದ ವರ್ಷ ನಡೆದ ಟೂರ್ನಿಯಲ್ಲಿ ಟ್ರೋಫಿ ಗೆಲ್ಲುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋಜತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗಿದ್ದ ಕಾಲ್ತುಳಿತದಿಂದಾಗಿ 11 ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಅಗಲಿದ ಅಭಿಮಾನಿಗಳಿಗೆ ಇಂದಿನ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಗೌರವ ಸಲ್ಲಿಸಲಾಗಿದೆ.
ಕ್ರೀಡಾಂಗಣದಲ್ಲಿ 11 ಸೀಟುಗಳನ್ನು ಖಾಲಿ ಬಿಡಲಾಗಿದ್ದು, ಆ ಅಭಿಮಾನಿಗಳ ಗೌರವಾರ್ಥವಾಗಿ ಇರಿಸಲಾಗಿದೆ. ಈ ಸೀಟುಗಳಿಗೆ ಬಿಳಿ ಬಣ್ಣ ಬಳಿಯಲಾಗಿದ್ದು, ಹೂಗಳಿಂದ ಅಲಂಕರಿಸಲಾಗಿದೆ. ಅಲ್ಲದೇ ಎರಡೂ ತಂಡಗಳ ಆಟಗಾರರು ಮೈದಾನ ಪ್ರವೇಶಿಸುವ ಮುನ್ನ ಬೌಂಡರಿ ಲೈನ್ ಬಳಿ ನಿಂತು ತಲೆಬಾಗಿ ಒಂದು ನಿಮಿಷದ ಕಾಲ ಮೌನಾಚರಣೆ ಮಾಡಿದರು. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಕಣಕ್ಕಿಳಿದು ಮೃತರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

