ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಯ ನಡುವೆ ಮೇಘಸ್ಫೋಟ ಸಂಭವಿಸಿದ್ದು, ಹಠಾತ್ ಪ್ರವಾಹಕ್ಕೆ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ. ನೈಸರ್ಗಿಕ ವಿಕೋಪಕ್ಕೆ 11 ಜನರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಶನಿವಾರ ರಾತ್ರಿಯಿಂದ ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ ಸುರುಯುತ್ತಿದ್ದು, ಇಂದು ಹಠಾತ್ ಪ್ರವಾಹ ಉಂಟಾಗಿದೆ. ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಜೌರಿಯಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಪರುಣಾಮ 11 ಜನರು ಬಲಿಯಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ನಿವಾಸಿಗಳ ರಕ್ಷಣೆಗಾಗಿ ಬೃಹತ್ ಕಾರ್ಯಾಚರಣೆ ಆರಂಭಿಸಲಾಗಿದೆ.
ಪ್ರವಾಹ ಹಾಗೂ ಭೂಕುಸಿತಕ್ಕೆ ಮನೆಗಳು, ಕಟ್ಟಡಗಳು ನೆಲಸಮವಾಗಿವೆ. ಪೂಂಚ್‌ನ ಸುರನ್‌ಕೋಟ್ ತಹಸಿಲ್ ಪ್ರದೇಶದಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಇಲ್ಲಿಯೇ ಅತಿ ಹೆಚ್ಚು ಸಾವುನೋವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಜೌರಿ ಜಿಲ್ಲೆಯಲ್ಲೂ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದ ನೀರು ವಸತಿ ಪ್ರದೇಶಗಳು ಮತ್ತು ತಗ್ಗು ಪ್ರದೇಶಗಳಿಗೆ ನುಗ್ಗಿದ್ದರಿಂದ ನೂರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪ್ರವಾಹದ ರಕ್ಷಣಾ ಗೋಡೆಗಳು ಕುಸಿದು ಬಿದ್ದಿದ್ದರಿಂದ ಹಲವು ವಾಹನಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರಜೌರಿ ಪಟ್ಟಣದ ನದಿಯೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ದೆಹಲಿ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಜಮ್ಮುವಿಗೆ ಮರಳಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೂ ಸಹ ರಕ್ಷಣಾ ಕಾರ್ಯಾಚರಣೆಯನ್ನು ಗಮನಿಸುತ್ತಿದ್ದು, ಪರಿಹಾರ ಕಾರ್ಯವನ್ನು ಚುರುಕುಗೊಳಿಸಲು ಆದೇಶಿಸಿದ್ದಾರೆ.

