ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಬಂಧಕ ಆದೇಶ ಕೋರಲಾದ ಅಸಲು ದಾವೆ ವಿಚಾರಣೆ ನಡೆಸುತ್ತಿರುವ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಸೆಷನ್ಸ್ ನ್ಯಾಯಾಧೀಶ ವಿಜಯಕುಮಾರ್ ರೈ ತಮ್ಮ ಮುಂದಿರುವ ಹಾಲಿ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದಾರೆ.
ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆ, ಡಿ. ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ನಿರ್ದೇಶಿಸಲು ಕೋರಿದ ಅಸಲು ದಾವೆಯ ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ಬೆಂಗಳೂರು ನಗರ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್ ನ್ಯಾಯಾಧೀಶರಿಗೆ 10ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರ ವಿಜಯಕುಮಾರ್ ರೈ ಕೋರಿದ್ದಾರೆ.
ಪ್ರಕರಣ ಸಂಬಂಧ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ಮಾಧ್ಯಮಗಳಿಗೆ ನಿರ್ದೇಶಿಸುವಂತೆ ಕೋರಿ ಡಿ. ಹರ್ಷೇಂದ್ರ ಕುಮಾರ್ ಅವರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಗೆ ಅಸಲು ದಾವೆ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಜಯಕುಮಾರ್ ಮಾಧ್ಯಮಗಳ ವಿರುದ್ಧ ಏಕಪಕ್ಷಿಯ ನಿರ್ಬಂಧಕಾಜ್ಞೆ ಹೊರಡಿಸಿದ್ದರು.
ನ್ಯಾಯಾಧೀಶ ವಿಜಯಕುಮಾರ್ ಅವರು ನೀಡಿದ್ದ ಪ್ರತಿಬಂಧಕ ಆದೇಶವನ್ನು ಪತ್ರಕರ್ತ ನವೀನ್ ಸೂರಿಂಜೆ, ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಾಳ್ಳ, ಬೈರಪ್ಪ ಹರೀಶ್ ಕುಮಾರ್ ಪ್ರಶ್ನಿಸಿದ್ದರು. ನ್ಯಾಯಾಧೀಶ ವಿಜಯಕುಮಾರ್ ಅವರು ಡಿ. ಹರ್ಷೇಂದ್ರ ಕುಮಾರ್ ಕುಟುಂಬದಿಂದ ನಿರ್ವಹಿಸುತ್ತಿರುವ ಮಂಗಳೂರಿನ ಧರ್ಮಸ್ಥಳ ಮಂಜುನಾಥ ಕಾನೂನು ಕಾನೂನು ಕಾಲೇಜಿನಲ್ಲಿ 25 ವರ್ಷದ ಹಿಂದೆ ವಿದ್ಯಾರ್ಥಿಯಾಗಿದ್ದರು. ಹೀಗಾಗಿ ಹಾಲಿ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ಕೋರಿ ಮೆಮೊ ಸಲ್ಲಿಸಿದ್ದರು.