ಬೆಂಗಳೂರು: ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜ್ಞಾನೇಂದ್ರ ಕುಮಾರ್ ಹಾಗೂ ಬಸವರಾಜ ಎನ್. ಕನ್ನಾಳೆ ಅವರನ್ನು ಸೆಪ್ಟೆಂಬರ್ 10ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ.
ಸಿಐಡಿ ಕಸ್ಟಡಿಗೆ ಪಡೆದಿರುವ ಅವಧಿಯಲ್ಲಿ ಆರೋಪಿಗಳಿಂದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹಾಗೂ ದಾಖಲೆಗಳನ್ನು ಸಂಗ್ರಹಿಸಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ.
ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.
ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ನಿವಾಸಿಯಾಗಿರುವ ಬಸವರಾಜ್ ಕನ್ನಾಳೆ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದು ಬಳಿಕ ಬಂಧಿಸಿದ್ರು. ನಂತರ ಭಾಲ್ಕಿಯ ಡೋಣಗಾಪುರ ಗ್ರಾಮದಲ್ಲಿರುವ ಅವರ ಮನೆ ಹಾಗೂ ಭಾಲ್ಕಿ ನಗರದ ಲೆಕ್ಚರರ್ ಕಾಲನಿಯಲ್ಲಿರುವ ನಿವಾಸದಲ್ಲೂ ಸಿಐಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಬಸವರಾಜ್ ಕನ್ನಾಳೆ ಅವರು 2025ರಿಂದ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿದ್ದಾರೆ ಎಂದು ವರದಿಯಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಐಡಿ ಮತ್ತಷ್ಟು ಚುರುಕುಗೊಳಿಸಿದ್ದು, ನೇಮಕಾತಿ ಅಕ್ರಮದಲ್ಲಿ ಅವರ ಪಾತ್ರದ ಕುರಿತು ವಿಚಾರಣೆ ನಡೆಸಲಾಗುತ್ತಿದೆ.
ಇದೇ ಪ್ರಕರಣದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಹಿಂದಿನ ಪರೀಕ್ಷಾ ನಿಯಂತ್ರಕ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನೂ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದೆ . ಕೆಪಿಎಸ್‌ಸಿ ಮೂಲಕ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮುಂದುವರಿದಿದ್ದು, ಹಗರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.

