ನವದೆಹಲಿ: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಮುನ್ನೆಲೆಗೆ ಬಂದಿರುವಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದಲ್ಲಿದ್ದು, ಎಐಸಿಸಿ ನಡೆಸುತ್ತಿರುವ ಮಹತ್ವದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ ಇಂಧನ ಸಚಿವ ಕೆ.ಜೆ.ಜಾರ್ಜ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.
ನವದೆಹಲಿಯ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಚಿವ ಕೆ.ಜೆ.ಜಾರ್ಜ್, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇಂದು ಸಂಜೆ 4ಗಂಟೆ ಸುಮಾರಿಗೆ ಕೆ.ಜೆ.ಜಾರ್ಜ್, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ರಾಜ್ಯದ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಡಿ.ಕೆ.ಶಿವಕುಮಾರ್ ಭೇಟಿಗೂ ಮುನ್ನವೇ ಸಚಿವ ಕೆ.ಜೆ.ಜಾರ್ಜ್ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.

