ಕೆ.ಎಸ್. ಈಶ್ವರಪ್ಪರಿಂದ ಇಂದು ಅಮಿತ್ ಶಾ ಭೇಟಿ; ಕುತೂಹಲ ಕೆರಳಿಸಿದ KSE ಮುಂದಿನ ನಡೆ

ತಮ್ಮ ಪುತ್ರ ಕೆ.ಇ. ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ಸಿಡಿದೆದ್ದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರ ವಿರುದ್ಧ ಸ್ಪರ್ಧೆಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ, ಅಪ್ಪ – ಮಕ್ಕಳ ವಶವಾಗಿದ್ದು, ಇದನ್ನು ಸರಿಪಡಿಸಲು ಹೋರಾಡುವುದಾಗಿ ಈಶ್ವರಪ್ಪ, ಯಡಿಯೂರಪ್ಪ ಮತ್ತವರ ಪುತ್ರರ ವಿರುದ್ಧ ಗುಡುಗಿದ್ದಾರೆ.

ಇದರ ಮಧ್ಯೆ ಮಂಗಳವಾರದಂದು ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ, ಈಶ್ವರಪ್ಪನವರಿಗೆ ಕರೆ ಮಾಡಿ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸೂಚಿಸಿದ್ದಾರಲ್ಲದೆ ಇಂದು ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಇಂದು ದೆಹಲಿಗೆ ಭೇಟಿ ನೀಡುತ್ತಿದ್ದು, ಅಮಿತ್ ಶಾ ಮನವೊಲಿಕೆಗೆ ಸ್ಪಂದಿಸಿ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುತ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಆದರೆ ಈ ಪ್ರಶ್ನೆಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದ್ದ ಈಶ್ವರಪ್ಪ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಮಾತ್ರ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ. ಆದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಬಿಜೆಪಿ ನಾಯಕರು ಇಂತಹದೊಂದು ಮಹತ್ವದ ನಿರ್ಧಾರ ಕೈಗೊಳ್ಳಲು ಸಾಧ್ಯವಾ ಎಂಬ ಪ್ರಶ್ನೆಯೂ ಮೂಡಿದೆ. ಹೀಗಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್. ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ನಿಶ್ಚಿತ ಎಂಬ ಮಾತು ಅವರ ಆಪ್ತ ವಲಯದಿಂದ ಕೇಳಿ ಬರುತ್ತಿದೆ. ಅಲ್ಲದೆ ನಾಮಪತ್ರ ಸಲ್ಲಿಕೆಯ ದಿನಾಂಕವನ್ನೂ ಸಹ ಈಶ್ವರಪ್ಪ ಈಗಾಗಲೇ ಘೋಷಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read