ಮೈಸೂರು: ಕಬಿನಿ ಹಾಗೂ ತಾರಕ ಜಲಾಶಯಳು ಭರ್ತಿಯಾಗಿದ್ದು, ನದಿ ಪಾತ್ರದ ಜನರಿಗೆ ಅಲರ್ಟ್ ಘೋಷಿಸಲಾಗಿದೆ.
ಕೇರಳದ ವಯನಾಡು ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಜಲಾಶಯದ ಹೊರಹರಿವು ಹೆಚ್ಚಾಗಿದೆ.
ಕಬಿನಿ ಜಲಾಶಯದಿಂದ 10,000ದಿಂದ 15,000 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ಪ್ರಮಾಣ ಯಾವುದೇ ಕ್ಷಣದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಜಲಾಶಯದ ಇಂಜಿನಿಯರ್ ಗಳು ಎಚ್ಚರಿಕೆ ನೀಡಿದ್ದಾರೆ.
ಇನ್ನು ಹೆಬ್ಬಳ ಗ್ರಾಮದಲ್ಲಿರುವ ತಾರಕ ಜಲಾನಯನ ಪ್ರದೇಶದಲ್ಲಿಯೂ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಗೈದೆ. ಜಲಾಶಯ ಗರಿಷ್ಠ ಮಟ್ಟ ತಲುಪುವ ಹಂತದಲ್ಲಿದೆ. ಯಾವುದೇ ಸಮಯದಲ್ಲಿ ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರನ್ನು ಹರಿಬಿಡಲಾಗುವುದು. ಹೀಗಾಗಿ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕು. ತಮ್ಮ ಆಸ್ತಿ-ಪಾಸ್ತಿ, ಜನ ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಗೈದೆ.