ಕಲಬುರಗಿ: ಕಲಬುರಗಿಯ ಹೈಕೋರ್ಟ್ ವೃತ್ತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿರುವ ಘಟನೆ ನಡೆದಿದೆ.
ಹೈಕೋರ್ಟ್ ವೃತ್ತದಲ್ಲಿ ಯಾವುದೇ ಅನುಮತಿಯಿಲ್ಲದೆ ಸಿದ್ದರಾಮಯ್ಯ ಅಭಿಮಾನಿಗಳು ರಾತ್ರೋರಾತ್ರಿ 9 ಅಡಿ ಎತ್ತರದ ಸಿದ್ದರಾಮಯ್ಯ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದರು. ಮಹಾನಗರ ಪಾಲಿಕೆ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಈ ಮೂರ್ತಿಯನ್ನು ತೆರವುಗೊಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಲಬುರಗಿಯಲ್ಲಿದ್ದು, ಅವರು ಕಲಬುರಗಿ ನಗರದಲ್ಲಿ ವಾಸ್ತವ್ಯ ಹೂಡಿದ್ದ ವೇಳೆಯಲ್ಲೇ, ಹೈಕೋರ್ಟ್ ವೃತ್ತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಮೂರ್ತಿಯನ್ನು ಅಭಿಮಾನಿಗಳು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದರು.
ಯಾವುದೇ ಕಾನೂನುಬದ್ಧ ಅನುಮತಿ ಪಡೆಯದೆ ಈ ಪ್ರತಿಮೆ ಸ್ಥಾಪಿಸಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಪಾಲಿಕೆ ಈ ಕಠಿಣ ಕ್ರಮ ಕೈಗೊಂಡಿದೆ.
ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ:
ಮತ್ತೊಂದೆಡೆ ತಳವಾರ ಸಮುದಾಯವನ್ನು ಎಸ್ ಟಿಗೆ ಸೇರಿಸುವಂತೆ ಆಗ್ರಹಿಸಿ ಅಫಜಲಪುರದಲ್ಲಿ ಪ್ರತಿಭಟನೆ ನಡೆದಿದೆ.
ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡ (ST) ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಫಜಲಪುರ ತಾಲೂಕಿನ ಚವಡಾಪುರ ಗ್ರಾಮದ ಬಳಿ ಪ್ರತಿಭಟನೆಗೆ ಸಜ್ಜಾಗಿದ್ದ ತಳವಾರ ಸಮುದಾಯದ ಮುಖಂಡ ಶಿವಕುಮಾರ್ ಸೇರಿದಂತೆ ಹಲವು ಹೋರಾಟಗಾರರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

