ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿಯಲಿ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮಕ್ಕಳು ಸೇರಿದಂತೆ 16 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ವಸತಿ ಕಟ್ಟಡದಲ್ಲಿ ಅನಿಲ ಸೋರಿಕೆಯಿಂದಾಗಿ ಈ ಸ್ಫೋಟ ಸಂಭವಿಸಿದೆ. ದುರಂತದಲ್ಲಿ 16 ಜನರು ಮೃತಪಟ್ಟಿದ್ದಾರೆ. 14 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದ ಕಟ್ಟಡದ ಮೊದಲ ಮಹಡಿಯಲ್ಲಿ ಈ ಸ್ಫೋಟ ಸಂಭವಿಸಿದೆ.
ಪ್ರಾಥಮಿಕ ತನಿಖೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ಸಂಭವಿಸಿದ ಸ್ಫೋಟ ಎಂದು ತಿಳಿದುಬಂದಿದೆ. ಇಲ್ಲಿನ ಬಹುತೇಕ ಮನೆಗಳಲ್ಲಿ ಜನರು ದೈನಂದಿನ ಬಳಕೆಗಾಗಿ ದ್ರವೀಕೃತ ಪೆಟ್ರೋಲಿಯಂ ಅನಿಲ ಸಿಲಿಂಡರ್ ಗಳನ್ನು ಅವಲಂಬಿಸಿದ್ದಾರೆ. ಅನಿಲ ಸೋರಿಕೆಯಿಂದ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳದಿಂದ ಈವರೆಗೆ 14 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಸ್ಫೋಟದ ರಭಸಕ್ಕೆ ಕಟ್ಟಡ ಒಂದು ಭಾಗ ಕುಸಿದು ಬಿದ್ದು, ಅವಶೇಷಗಳ ಅಡಿಯಲ್ಲಿ ಕೆಲವರು ಸಿಲುಕಿರುವ ಶಂಕೆ ಇದೆ ಎಂದು ತಿಳಿಸಿದ್ದಾರೆ.

