ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದೇ ವೇಳೆ ನಾಡದ್ರೋಹಿ ಎಂಇಎಸ್ ಮುಖಂಡರು ಬೆಳಗಾವಿಯಲ್ಲಿ ಮಹಾಮೇಳಾವ್ ನಡೆಸಲು ಮುಂದಾಗಿದ್ದರು. ಆದರೆ ಬೆಳಗಾವಿ ಜಿಲ್ಲಾಡಳಿತ ಎಂಇಎಸ್ ಮಹಾಮೇಲಾವ್ ಗೆ ಅವಕಾಶ ನೀಡಿಲ್ಲ. ಇದನ್ನು ಖಂಡಿಸಿ ಎಂಇಎಸ್ ಕಾರ್ಯಕರ್ತರು ಪುಂಡಾಟ ಮೆರೆದಿದ್ದಾರೆ. ಕೊಲ್ಲಾಪುರದಲ್ಲಿ ಕರ್ನಾಟಕ ಬಸ್ ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಂಇಎಸ್ ಪುಂಡಾಟ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಹಾರಾಷ್ಟ್ರದ ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಲ್ಲಾಪುರದಲ್ಲಿ ಕರ್ನಾಟಕ ಬಸ್ ಮೇಲೆ ಎಂಇಎಸ್ ಪುಂಡಾಟ ಮೆರೆದ ಹಿನ್ನಲೆಯಲ್ಲಿ ಕರವೇ ಕಾರ್ಯಕರ್ತರು ಎಂಇಎಸ್ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, ಎಂಇಎಸ್ ಪುಂಡಾಟಕ್ಕೆ ಬ್ರೇಕ್ ಹಾಕುವ ಭರವಸೆ ನೀಡಿದ್ದಾರೆ.
