ಬೆಂಗಳೂರು: ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ತಿಳಿದುಬಂದಿದೆ.
ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಅಂದು ಬೆಂಗಳೂರಿನ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೂ ಬೆಳಿಗ್ಗೆ 11 ಗಂಟೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ.
ಆದರೆ ಬಂದ್ ಕರೆಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡಿಲ್ಲ ಎನ್ನಲಾಗಿದೆ. ಕರವೇ ನಾರಾಯಣಗೌಡ ಬಣ ಹಾಗೂ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಈ ಬಂದ್ ಕರೆಗೆ ಬೆಂಬಲವಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರವೀಣ್ ಶೆಟ್ಟಿ ಸದ್ಯಕ್ಕೆ ಬಂದ್ ಗೆ ಬೆಂಬಲವಿಲ್ಲ ಎಂದಿದ್ದಾರೆ. ಇನ್ನು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸದ್ಯಕ್ಕೆ ಬಂದ್ ಗೆ ಬೆಂಬಲಿಸುವ ಶಕ್ತಿ ನಮ್ಮಲ್ಲಿಲ್ಲ. ಬೆಂಬಲದ ಬಗ್ಗೆ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.
ಒಟ್ಟಾರೆ ಅಖಂಡ ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿದ್ದರೆ, ಇನ್ನು ಕೆಲ ಸಂಘಟನೆಗಳು ಬೆಂಬಲ ನೀಡಲು ಮುಂದಾಗಿಲ್ಲ.