ಕರ್ನಾಟಕ ಸರ್ಕಾರ 56,000 ಸರ್ಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ನಡೆಸುತ್ತಿದೆ. ಸರ್ಕಾರಿ ಹುದ್ದೆಗಳನ್ನು ನೇಮಕಕ್ಕೆ ಒತ್ತಾಯಿಸಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ನೇಮಕಾತಿಗೆ ಒಪ್ಪಿಗೆ ನೀಡಲಾಗಿದೆ, ಆದರೆ ಮೀಸಲಾತಿ?.
ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಮತ್ತು ಸಂಶೋಧಕರ ಸಂಘ ಮೀಸಲಾತಿ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದೆ.
ಈ ಪತ್ರವು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಅನ್ವಯ 56,000 ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ತಕ್ಷಣ ಕ್ರಮ ಕೈಗೊಳ್ಳುವ ಬಗ್ಗೆ ಎಂಬ ವಿಚಾರವನ್ನು ಒಳಗೊಂಡಿದೆ.
ಪತ್ರದ ವಿವರ: ಈ ಪತ್ರದ ಮೂಲಕ ರಾಜ್ಯದ ಲಕ್ಷಾಂತರ ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಪರವಾಗಿ ನಿಮ್ಮ ಗಮನವನ್ನು ಒಂದು ಗಂಭೀರ ವಿಷಯದ ಕಡೆಗೆ ಸೆಳೆಯಲು ಇಚ್ಛಿಸುತ್ತೇವೆ.
ಇತ್ತೀಚೆಗೆ ಮಾನ್ಯ ಸುಪ್ರೀಂಕೋರ್ಟ್ ಪರಿಶಿಷ್ಟ ಜಾತಿಗಳಲ್ಲಿನ ಅತ್ಯಂತ ಹಿಂದುಳಿದ ಉಪಜಾತಿಗಳಿಗೆ ಒಳ ಮೀಸಲಾತಿ (Internal Reservation) ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಸಂವಿಧಾನಬದ್ಧ ಅಧಿಕಾರ ನೀಡಿದೆ.
ಈ ಐತಿಹಾಸಿಕ ತೀರ್ಪಿನ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಒಳ ಮೀಸಲಾತಿ ಜಾರಿಗೆ ತರಲು ವಿಧೇಯಕವನ್ನು ಅಂಗೀಕರಿಸಿದ್ದು, ಅದಕ್ಕೆ ಮಾನ್ಯ ರಾಜ್ಯಪಾಲರ ಅಂಕಿತವೂ ಲಭಿಸಿರುವುದು ಸ್ವಾಗತಾರ್ಹ.
ಆದರೆ, ಪ್ರಸ್ತುತ ರಾಜ್ಯ ಸರ್ಕಾರವು ಘೋಷಿಸಿರುವ 56,437 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿ ಪ್ರಕ್ರಿಯೆಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸದೆ ಹಳೆಯ ಪದ್ಧತಿಯಲ್ಲೇ ನೇಮಕಾತಿ ನಡೆಸಲು ಮುಂದಾಗಿರುವುದು ಅತ್ಯಂತ ಖೇದಕರ ಮತ್ತು ಅನ್ಯಾಯದ ಸಂಗತಿಯಾಗಿದೆ. ಇದು ದಶಕಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿರುವ ಮಾದಿಗ ಮತ್ತು ಇತರ ಹಿಂದುಳಿದ ಉಪಜಾತಿಗಳ ಆಶೋತ್ತರಗಳಿಗೆ ವಿರುದ್ಧವಾಗಿದೆ.
ಪ್ರಮುಖ ಬೇಡಿಕೆಗಳು
- ಈಗ ಘೋಷಿಸಲಾಗಿರುವ 56,000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಯಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಒಳ ಮೀಸಲಾತಿಯನ್ನು (Internal Reservation) ಕಡ್ಡಾಯವಾಗಿ ಜಾರಿಗೆ ತರಬೇಕು.
- ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಸಮಿತಿಯ ವರದಿಯಂತೆ ವೈಜ್ಞಾನಿಕವಾಗಿ ವರ್ಗೀಕರಣ ಮಾಡಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕು.
- ಯಾವುದೇ ಕಾರಣಕ್ಕೂ ಒಳ ಮೀಸಲಾತಿಯನ್ನು ಕೈಬಿಟ್ಟು ನೇಮಕಾತಿ ಪ್ರಕ್ರಿಯೆ ಆರಂಭಿಸಬಾರದು.
ಒಂದು ವೇಳೆ ಸರ್ಕಾರವು ನಮ್ಮ ಈ ನ್ಯಾಯಸಮ್ಮತ ಬೇಡಿಕೆಯನ್ನು ನಿರ್ಲಕ್ಷಿಸಿ, ಒಳ ಮೀಸಲಾತಿ ಇಲ್ಲದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಿದ್ದೇ ಆದಲ್ಲಿ, ರಾಜ್ಯಾದ್ಯಂತ ಇರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು, ಯುವಕರು ಮತ್ತು ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಈ ಹೋರಾಟದಿಂದ ಉಂಟಾಗುವ ಯಾವುದೇ ಅಹಿತಕರ ಘಟನೆಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ. ಆದ್ದರಿಂದ, ತಾವು ಕೂಡಲೇ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಬಡ ಮತ್ತು ಶೋಷಿತ ಪರಿಶಿಷ್ಟ ಜಾತಿಗಳಿಗೆ ನ್ಯಾಯ ಒದಗಿಸಬೇಕೆಂದು ಈ ಮೂಲಕ ಆಗ್ರಹಿಸುತ್ತಿದ್ದೇವೆ.

