ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಉಪಸಾಗರದ ವಾಯುವ್ಯ ಭಾಗ ಒಡಿಸ್ಸಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದು ಕರ್ನಾಟಕದ ಮೇಲೂ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ ವಾಪಕವಾಗಿ ಮಳೆಯಾಗಲಿದೆ. ಇಂದಿನಿಂದ ಮೇ 30ರವರೆಗೂ ಧಾರಾಕಾರ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳು, ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಹಾಸನ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಜೋರಾಗಲಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಈ ತಿಂಗಳ ಅಂತ್ಯದವರೆಗೂ ಹಗುರ ಮಳೆಯಾಗಲಿದೆ.
ಮೇ 31ರಿಂದ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.