ಬೆಂಗಳೂರು, ಸೆಪ್ಟೆಂಬರ್ 23: ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಸೆಪ್ಟೆಂಬರ್ 23 ಮತ್ತು 24ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಸೆಪ್ಟೆಂಬರ್ 24ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಇದೇ ಅವಧಿಯಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 23ರಂದು ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 24ರಂದು ಈ ಮೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಬಹುದು.ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಉತ್ತರ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?
ಸೆಪ್ಟೆಂಬರ್ 23ರಂದು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಯಾದಗಿರಿ, ಧಾರವಾಡ, ರಾಯಚೂರು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗಬಹುದು.
ಸೆಪ್ಟೆಂಬರ್ 24ರಂದು ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಾವೇರಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿಗೂ ಮಳೆ
ಸೆಪ್ಟೆಂಬರ್ 23ರಂದು ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸೆಪ್ಟೆಂಬರ್ 24ರಂದು ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಬಹುದು. ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ.
ಐಎಂಡಿ ಮಾಹಿತಿ ಪ್ರಕಾರ, ಮಂಗಳವಾರ ಸಂಜೆಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಕೂಡ ಮಳೆ ದಾಖಲಾಗಿದೆ.
ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ 8 ಸೆಂ.ಮೀ. ಮಳೆಯಾಗಿದ್ದು, ಬೆಂಗಳೂರು ನಗರದ ಹೆಸರಘಟ್ಟದಲ್ಲಿ 6 ಸೆಂ.ಮೀ., ವಿಜಯಪುರ ಜಿಲ್ಲೆಯ ಇಂಡಿಯಲ್ಲಿ 6 ಸೆಂ.ಮೀ. ಮತ್ತು ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ 5 ಸೆಂ.ಮೀ. ಮಳೆ ದಾಖಲಾಗಿದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಉತ್ತರ ಆಂಧ್ರ ಪ್ರದೇಶದ ಕರಾವಳಿ ಭಾಗದತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೆಲವು ಭಾಗಗಳಲ್ಲೂ ಅದರ ಪರೋಕ್ಷ ಪರಿಣಾಮ ಕಂಡುಬರುವ ಸಾಧ್ಯತೆಯಿದೆ.
ಮುಂದಿನ ದಿನಗಳಲ್ಲಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ ಹಾಗೂ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ.
ಮತ್ತೊಂದೆಡೆ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು. ಸೆಪ್ಟೆಂಬರ್ 24ರ ಬಳಿಕ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಕಂಡುಬರಬಹುದು. ಕರ್ನಾಟಕ-ಕೇರಳ ಗಡಿ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಬಹುದು. ಸೆಪ್ಟೆಂಬರ್ 29ರ ಬಳಿಕ ಕೊಡಗು ಮತ್ತು ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

