HomeTourismಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ, 10 ದ್ವೀಪ ಆಯ್ಕೆ

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ, 10 ದ್ವೀಪ ಆಯ್ಕೆ

“ರಾಜ್ಯದ ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವ ಉದ್ದೇಶದಿಂದ, ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳಲ್ಲಿನ 20 ದ್ವೀಪಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದ್ದು, ಅವುಗಳಲ್ಲಿ ಈಗಾಗಲೇ 10 ದ್ವೀಪಗಳಲ್ಲಿ ಫಿಸಿಬಿಲಿಟಿ ಸರ್ವೇ ಮಾಡಿ, ಇಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬಹುದೆಂದು ವರದಿ ಪಡೆಯಲಾಗಿದೆ” ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.

ಭಟ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, “ರಾಜ್ಯದ ಕರಾವಳಿ ಪ್ರದೇಶದಲ್ಲಿ ಸಿಆರ್ಝಡ್‌ ದೊಡ್ಡ ಸಮಸ್ಯೆ ಇದ್ದು, ಅದನ್ನು ಇತ್ಯರ್ಥಪಡಿಸಬೇಕಿದೆ. ಸಿಆರ್‌ಝಡ್‌ನ ಪರಿಷ್ಕೃತ ಮ್ಯಾಪ್‌ಗೆ ಅನುಮೋದನೆ ಮಾಡಲು ರಾಜ್ಯದಲ್ಲೇ ಇದುವರೆಗೆ ಯಾವುದೇ ಸಂಸ್ಥೆ ಇಲ್ಲವಾಗಿದ್ದು, ಇದಕ್ಕಾಗಿ ಪಕ್ಕದ ರಾಜ್ಯಗಳನ್ನು ಅವಲಂಬಿಸಬೇಕಿತ್ತು” ಎಂದರು.

“ಪ್ರಸ್ತುತ ರಾಜ್ಯದಲ್ಲೇ ಸಿಆರ್ಝಡ್ ಮ್ಯಾಪ್ ಅನುಮೋದನೆ ಮಾಡುವ ಸಂಸ್ಥೆಯನ್ನು ಗುರುತಿಸಲಾಗಿದ್ದು, ಇದರಿಂದ ರಾಜ್ಯದಲ್ಲಿನ ಸಿಆರ್ಝಡ್ ಸಂಬಂಧಿತ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯಲಿದೆ” ಎಂದು ಭರವಸೆ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೂಡಿಕೆದಾರರು ಮುಂದೆ ಬಂದಲ್ಲಿ, ಅವರಿಗೆ ಅಗತ್ಯವಿರುವ ಬ್ಯಾಂಕ್ ಸಾಲ, ಸಬ್ಸಿಡಿ, ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಹೂಡಿಕೆದಾರರಿಗೆ ಪೂರಕವಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು” ಎಂದರು.

ಸಿದ್ದರಾಮಯ್ಯ ಹೇಳಿದ್ದೇನು?: ಕಳೆದ ವಾರ ಮಂಗಳೂರಿನಲ್ಲಿ ನಡೆದ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ -2026ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.

ಸಮಾವೇಶದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, “ಪ್ರವಾಸೋದ್ಯಮ ಸಮಾವೇಶ -2026ರಲ್ಲಿ ಬಂಡವಾಳ ಹೂಡಿಕೆ ಮಾಡಲು ಲೆಟರ್ ಆಫ್ ಇಂಟೆಂಟ್‌ಗೆ ಅನೇಕರು ಸಹಿ ಹಾಕಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಮುಂದಾಗುವವರಿಗೆ ಸರ್ಕಾರ ನೆರವಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶಗಳಿರುವ ಜಿಲ್ಲೆಗಳು” ಎಂದು ಹೇಳಿದ್ದರು.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರವಾಸೋದ್ಯಮ ನೀತಿ ರೂಪಿಸಿದೆ. ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕಾದ ಅನೇಕ ಸ್ಥಳಗಳಲ್ಲಿದ್ದು, ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. 2024 ರಿಂದ 29ರ ವರೆಗೆ ಐದು ವರ್ಷಗಳ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗಿದೆ” ಎಂದು ತಿಳಿಸಿದ್ದರು.

“ಸುಮಾರು 320 ಕಿ.ಮೀ. ಕರಾವಳಿ ಪ್ರದೇಶವಿದ್ದರೂ, ಇಲ್ಲಿಯವರೆಗೆ ಅದನ್ನು ಪ್ರವಾಸೋದ್ಯಮಕ್ಕೆ ಸೂಕ್ತವಾಗಿ ಬಳಸಿಕೊಂಡಿಲ್ಲ. ಜಾಗತಿಕವಾಗಿ ಗುರುತಿಸಲ್ಪಟ್ಟ ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ನಮ್ಮ ಸರ್ಕಾರ ಆಸಕ್ತಿ ವಹಿಸಿದೆ” ಎಂದು ಹೇಳಿದ್ದರು.

“ಈ ಭಾಗದಲ್ಲಿ ಬ್ಯಾಂಕಿಂಗ್, ಶಿಕ್ಷಣ ಮತ್ತು ಆರೋಗ್ಯಕ್ಕೆ ವಿಶೇಷವಾಗಿ ಆದ್ಯತೆ ನೀಡಿ ಅಭಿವೃದ್ಧಿಯಾಗಿದೆ. ಕರಾವಳಿಯ ಸರಾಸರಿ ಸಾಕ್ಷರತಾ ಪ್ರಮಾಣ 2011ರಲ್ಲಿ 88.56% ಇತ್ತು. ತೆರಿಗೆ ಕೊಡುವುದರಲ್ಲಿ ನಮ್ಮ ರಾಜ್ಯ ಮುಂದಿದೆ. ಜಿ ಎಸ್.ಟಿ ಸಂಗ್ರಹಣೆಯಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿದ್ದು, ಇದರಲ್ಲಿ ಕರಾವಳಿ ಜಿಲ್ಲೆಗಳ ಪಾತ್ರ ಹಿರಿದಿದೆ. ಬೆಂಗಳೂರು ಬಿಟ್ಟರೆ ಮಂಗಳೂರು ಹೆಚ್ಚಿನ ಕೊಡುಗೆ ನೀಡುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಮಹಾರಾಷ್ಟ್ರವನ್ನು ಹಿಂದಿಕ್ಕುವ ಅವಕಾಶ ನಮಗಿದೆ” ಎಂದು ವಿವರಿಸಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular