ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಅಲರ್ಟ್ ಘೋಷಿಸಿದೆ.
ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಧಾರಾಕ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 6 ರಿಂದ 8 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ್ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಮ್ತೆ, ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಬಾಗಲಕೋಟೆ, ಬಿದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇಂದು ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು,ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

