ಮೈಸೂರು: ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಮೈಸೂರಿನ ಕರ್ನಾಟಕ ಕಲಾಮಂದಿರದಲ್ಲಿ ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತ್ಯೋತ್ಸವ ಸಮಿತಿ ಸಂಯುಕ್ತವಾಗಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೆಪಿಎಸ್ ಶಾಲೆಗಳ ಮೂಲಕ ಪೂರ್ವ ಪ್ರಾಥಮಿಕದಿಂದ ಪಿಯುಸಿವರೆಗೆ ಒಂದೇ ಕ್ಯಾಂಪಸ್ ನಲ್ಲಿ ಶಿಕ್ಷಣ ಪಡೆಯುವ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ. ಒಂದೇ ಕ್ಯಾಂಪಸ್‌ನಲ್ಲಿ ಸುಮಾರು 1,200 ಮಕ್ಕಳು ಕಲಿಯಬಹುದಾಗಿದೆ. ಮೊದಲ ಹಂತದಲ್ಲಿ ರಾಜ್ಯದಲ್ಲಿ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸುವ ಕಾರ್ಯ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.
ನಾರಾಯಣ ಗುರುಗಳು ಇಡೀ ಮನು ಕುಲಕ್ಕೆ ದಾರಿ ತೋರಿದ ಮಹಾನ್ ಚಿಂತಕರಾಗಿದ್ದು, ಅವರು ಸಾರಿದ ಜ್ಞಾನ, ಶಿಕ್ಷಣ, ಸಂಘಟನೆ, ಸಮಾನತೆ ಹಾಗೂ ಸ್ವಾಭಿಮಾನದ ತತ್ವಗಳನ್ನು ಇಂದಿನ ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ನಾರಾಯಣ ಗುರುಗಳು ಪ್ರತಿಪಾದಿಸಿದ ಮಾನವೀಯ ಮೌಲ್ಯಗಳನ್ನು ಎಂದಿಗೂ ಮರೆಯಬಾರದು. ಸಮುದಾಯದ ಸಂಘಟನೆ ಉತ್ತಮವಾಗಿ ನಡೆಯುತ್ತಿದೆ. ಯುವಕರು ಇನ್ನಷ್ಟು ಒಗ್ಗಟ್ಟಾಗಿ ಮುನ್ನಡೆಯಬೇಕು. ನಿಮಗೆ ಯಾವುದೇ ಸಹಕಾರ ಬೇಕಾದರೂ ನೀಡಲು ನಾನು ಸಿದ್ಧನಿದ್ದೇನೆ. ನಿಮ್ಮ ಎಲ್ಲ ಹೋರಾಟಗಳಿಗೂ ನಾನು ಜೊತೆಗಿದ್ದೇನೆ ಎಂದು ಸಚಿವರು ಭರವಸೆ ನೀಡಿದರು.
ಸಮಾನ ಅವಕಾಶ, ಸ್ವಾವಲಂಬನೆ ಮತ್ತು ಸ್ವಾಭಿಮಾನವೇ ನಾರಾಯಣ ಗುರುಗಳ ಸಂದೇಶದ ಪ್ರಮುಖ ಅಂಶಗಳು. ಜ್ಞಾನ ಮತ್ತು ಶಿಕ್ಷಣಕ್ಕೆ ಅವರು ವಿಶೇಷ ಒತ್ತು ನೀಡಿದ್ದರು. ಆದ್ದರಿಂದ ನಾರಾಯಣ ಗುರುಗಳ ವಿಚಾರಗಳು ಕೇವಲ ಜಯಂತಿ ವೇದಿಕೆಗಳಿಗೆ ಸೀಮಿತವಾಗದೆ, ಮಕ್ಕಳ ಪಠ್ಯಪುಸ್ತಕಗಳಲ್ಲೂ ಹಾಗೂ ಅವರ ಮನಸ್ಸಿನಲ್ಲೂ ಇರಬೇಕು ಎಂದರು.
ಮೊದಲ ಬಾರಿಗೆ ಶಾಸಕನಾಗಿ ವಿಧಾನಸಭೆಗೆ ಪ್ರವೇಶಿಸಿದ ಸಂದರ್ಭದಲ್ಲಿ ನಾರಾಯಣ ಗುರುಗಳ ಕುರಿತು ಮೂರು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೆ. ನಾರಾಯಣ ಗುರು ಅಧ್ಯಯನ ಪೀಠ ಸ್ಥಾಪನೆ, ಶಾಲಾ ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಕುರಿತು ಪಾಠ ಅಳವಡಿಕೆ ಹಾಗೂ ರಾಜ್ಯ ಸರ್ಕಾರದ ವತಿಯಿಂದ ನಾರಾಯಣ ಗುರು ಜಯಂತಿಯನ್ನು ಅಧಿಕೃತವಾಗಿ ಆಚರಿಸುವಂತೆ ಮನವಿ ಮಾಡಿದ್ದೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ನನ್ನ ಮೂರು ಮನವಿಗಳಿಗೂ ಸ್ಪಂದಿಸಿ ಅಂದೇ ಒಪ್ಪಿಗೆ ನೀಡಿದ್ದರು. ಆಗ ಶಿಕ್ಷಣ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್ ಅವರು ಮರು ವರ್ಷವೇ ಶಾಲಾ ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಕುರಿತು ಪಾಠ ಅಳವಡಿಸಲು ಕ್ರಮ ಕೈಗೊಂಡರು. ಇದು ನನಗೆ ವೈಯಕ್ತಿಕವಾಗಿ ಹೆಮ್ಮೆ ತಂದ ಸಂಗತಿ ಎಂದು ಮಧು ಬಂಗಾರಪ್ಪ ಹೇಳಿದರು.
ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ
ನಾರಾಯಣ ಗುರುಗಳು ಶಿಕ್ಷಣಕ್ಕೆ ಅತ್ಯಂತ ಮಹತ್ವ ನೀಡಿದ್ದರು. ‘ಮಕ್ಕಳಿಗೆ ಪೆನ್ನು ಕೊಡಿ, ಅವರೇ ತಮ್ಮ ಭವಿಷ್ಯವನ್ನು ಬರೆದುಕೊಳ್ಳುತ್ತಾರೆ’ಎಂಬ ಸಂದೇಶವನ್ನು ನಾವು ಅರ್ಥಮಾಡಿಕೊಳ್ಳಬೇಕು. ಶಿಕ್ಷಣ ಸಚಿವನಾಗಿ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಒಂದು ಕೋಟಿಗೂ ಹೆಚ್ಚು ಮಕ್ಕಳ ಭವಿಷ್ಯಕ್ಕಾಗಿ ಕೆಲಸ ಮಾಡುವ ಅವಕಾಶ ನನಗೆ ದೊರೆತಿರುವುದು ನನ್ನ ಅದೃಷ್ಟ ಎಂದರು.
ಪಕ್ಷವು ನನಗೆ ಎರಡನೇ ಬಾರಿಗೆ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ನೀಡಿದೆ. ನನ್ನ ಮೇಲೆ ನಂಬಿಕೆ ಇಡಿ. ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದು ಹೇಳಿದರು.
ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದ ಜನಪರ ಕಾರ್ಯಕ್ರಮಗಳನ್ನು ಸ್ಮರಿಸಿದ ಸಚಿವರು, ಉಚಿತ ಪಂಪ್‌ಸೆಟ್ ಯೋಜನೆ ರೈತರ ಬದುಕಿಗೆ ಬೆಳಕಾಯಿತು. ಆಶ್ರಯ ಯೋಜನೆ ಬಡ ಕುಟುಂಬಗಳಿಗೆ ನೆರವಾಯಿತು. ಗ್ರಾಮೀಣ ಕೃಪಾಂಕ ಯೋಜನೆ ಸರ್ಕಾರಿ ಉದ್ಯೋಗ ಪಡೆಯಲು ಸಹಕಾರಿಯಾಯಿತು. ಅಕ್ಷರ ಯೋಜನೆ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಕಾರಣವಾಯಿತು ಎಂದರು.
ತಳಮಟ್ಟದಿಂದ ಬೆಳೆದು ರಾಜ್ಯದ ಮುಖ್ಯಮಂತ್ರಿಯಾದವರು ಬಂಗಾರಪ್ಪ. ಅವರ ಶಿಷ್ಯ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಡಿ.ಕೆ. ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿಯಾಗಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು.
ನಮ್ಮ ಸಮುದಾಯದ ಎರಡು ಕಣ್ಣುಗಳಂತಿರುವವರು ನಾರಾಯಣ ಗುರುಗಳು ಮತ್ತು ವರನಟ ಡಾ. ರಾಜ್‌ಕುಮಾರ್. ಇವರ ಜೊತೆಗೆ ನಟ ಪುನೀತ್ ರಾಜ್‌ಕುಮಾರ್ ಅವರು ಮೂರನೇ ಕಣ್ಣಿನಂತಿದ್ದಾರೆ. ನ್ಯಾಯಾಂಗ ಕ್ಷೇತ್ರದಲ್ಲಿಯೂ ನಮ್ಮ ಸಮಾಜದ ಸಾಧಕರು ಗುರುತಿಸಿಕೊಂಡಿದ್ದಾರೆ. ಇಂತಹ ಸಾಧಕರ ಬಗ್ಗೆ ಸಮಾಜ ಹೆಮ್ಮೆಪಡಬೇಕು ಎಂದರು.
ಮಹಾತ್ಮ ಗಾಂಧೀಜಿ ಅವರು ನಾರಾಯಣ ಗುರುಗಳನ್ನು ಭೇಟಿಯಾಗಿ ಚರ್ಚಿಸಿದ್ದರು. ಸಮಾಜ ಸುಧಾರಣೆ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ನಾರಾಯಣ ಗುರುಗಳು ನೀಡಿದ ಕೊಡುಗೆ ಅಪಾರವಾಗಿದೆ. ಅವರ ವಿಚಾರಧಾರೆ ಇಂದಿನ ಸಮಾಜಕ್ಕೂ ದಾರಿದೀಪವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶಿವಮೊಗ್ಗ ನಾರಾಯಣ ಗುರು ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ರೇಣುಕಾನಂದ ಸ್ವಾಮೀಜಿ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ, ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮರಿಸ್ವಾಮಿ, ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ. ಎಂ ತಿಮ್ಮೇಗೌಡ, ಮೈಸೂರು ಮತ್ತು ಚಾಮರಾಜ ನಗರ ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ. ಎಂ ಕೆ ಪೋತರಾಜ್, ಮೈಸೂರು ಮಹಿಳಾ ಆರ್ಯ ಈಡಿಗ ಸಂಘದ ಅಧ್ಯಕ್ಷರಾದ ಸರೋಜಮ್ಮ ಪಾಪೇಗೌಡ ಸೇರಿದಂತೆ ಇತರ ಗಣ್ಯರು ವೇದಿಕೆಯಲ್ಲಿ ಇದ್ದರು.
ಮಧು ಬಂಗಾರಪ್ಪ ಮುಖ್ಯಮಂತ್ರಿ ಆಗಲಿ: ಹರೀಶ್ ಗೌಡ
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರಂತೆ ಅವರ ಪುತ್ರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರೂ ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿಯಾಗಬೇಕು. ಆ ಅರ್ಹತೆ ಅವರಿಗಿದೆ ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಹೇಳಿದರು.
ಶಾಸಕನಾಗಿ ಮಧು ಬಂಗಾರಪ್ಪ ಅವರನ್ನು ಹತ್ತಿರದಿಂದ ಗಮನಿಸಿದ್ದೇನೆ. ಶಿಕ್ಷಣ ಸಚಿವರಾಗಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಮುಖ್ಯಮಂತ್ರಿ ಆಗಲಿ ಎಂದು ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೆ. ಹರೀಶ್ ಗೌಡ ಹೇಳಿದರು.
ಎಸ್. ಬಂಗಾರಪ್ಪ ಅವರು ಮೈಸೂರು ನಗರದೊಂದಿಗೆ ವಿಶೇಷ ಬಾಂಧವ್ಯ ಹೊಂದಿದ್ದರು. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಡವರು, ದೀನದಲಿತರು ಸೇರಿದಂತೆ ಸಮಾಜದ ದುರ್ಬಲ ವರ್ಗಗಳಿಗಾಗಿ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಅದರಲ್ಲೂ ‘ಆರಾಧನಾ’ ಕಾರ್ಯಕ್ರಮವನ್ನು ಮರೆಯಲು ಸಾಧ್ಯವಿಲ್ಲ ಎಂದರು.
ತಮ್ಮ ತಂದೆ ಎಸ್. ಬಂಗಾರಪ್ಪ ಅವರು ಜಾರಿಗೆ ತಂದ ಜನಪರ ಯೋಜನೆಗಳನ್ನು ಮೀರಿಸುವಂತಹ ಇನ್ನಷ್ಟು ಜನಪರ ಯೋಜನೆಗಳನ್ನು ಮಧು ಬಂಗಾರಪ್ಪ ಅವರು ಜಾರಿಗೆ ತರಲಿ ಎಂದು ಹರೀಶ್ ಗೌಡ ಆಶಿಸಿದರು.

