ಬೆಳಗಾವಿ: ಕಬ್ಬಿಗೆ ಪ್ರತಿ ಟನ್ಗೆ ₹5,500 ದರ ನಿಗದಿಪಡಿಸಬೇಕು ಹಾಗೂ ಸಕ್ಕರೆಗೂ ಕನಿಷ್ಠ ಬೆಂಬಲ ಬೆಲೆ (MSP) ಘೋಷಿಸಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ರಾಜ್ಯಾದ್ಯಂತ ತೀವ್ರಗೊಂಡಿದೆ. ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಳಗಾವಿ, ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ಅಥಣಿ, ಬಾಗಲಕೋಟೆ, ವಿಜಯಪುರ, ಧಾರವಾಡ ಹಾಗೂ ಹಾವೇರಿ ಸೇರಿದಂತೆ ವಿವಿಧೆಡೆ ರೈತರು ಬೆಂಬಲ ವ್ಯಕ್ತಪಡಿಸಿದ್ದಾರೆ. ರಸ್ತೆ ತಡೆ, ಹೆದ್ದಾರಿ ಬಂದ್, ಧರಣಿ ಹಾಗೂ ಅಂಗಡಿ ಮುಂಗಟ್ಟುಗಳ ಬಂದ್ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕಳೆದ 15 ದಿನಗಳಿಂದ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಬೆಳಗಾವಿ ಜಿಲ್ಲೆಯೊಂದರಲ್ಲೇ ಸುಮಾರು 27 ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ರಾಷ್ಟ್ರೀಯ ಹೆದ್ದಾರಿ ಬಂದ್ಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ ರೈತರು ಕರ್ನಾಟಕ ಬಂದ್ಗೆ ಕರೆ ನೀಡಿ ವಿವಿಧೆಡೆ ರಸ್ತೆಗಿಳಿದಿದ್ದಾರೆ.
ರೈತರ ಪ್ರತಿಭಟನೆ ಹೋರಾಟದ ಕ್ರಮಗಳು
ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ರೈತರು ಬಸ್ಗಳ ಸಂಚಾರ ತಡೆಯಲು ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದರು. ಗಂಟೆ ಬಾರಿಸುತ್ತಾ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಸ್ ಸಂಚಾರ ಸ್ಥಗಿತಗೊಳಿಸಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದರಿಂದ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ, ನೂಕಾಟ, ತಳ್ಳಾಟ ನಡೆಯಿತು. ಬಳಿಕ ಕೆಲ ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಇದರಿಂದ ಪ್ರಯಾಣಿಕರು ಕೆಲಕಾಲ ಪರದಾಡುವಂತಾಯಿತು.
ಗೋಕಾಕ್-ಹಿಡಕಲ್ ಡ್ಯಾಂ-ಬೆಳಗಾವಿ ರಾಜ್ಯ ಹೆದ್ದಾರಿ ಹಾಗೂ ಮೂಡಲಗಿ ತಾಲೂಕಿನ ಮುಸಗುಪ್ಪಿ-ಮಹಾಲಿಂಗಪುರ ಸಂಪರ್ಕ ರಸ್ತೆಯನ್ನು ರೈತರು ತಡೆದಿದ್ದಾರೆ. ರಸ್ತೆಯಲ್ಲೇ ಅಡುಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಗೋಕಾಕ್ ತಾಲೂಕಿನ ಹಲವು ಭಾಗಗಳಲ್ಲಿ ಬಸ್ ಸಂಚಾರಕ್ಕೆ ಅಡ್ಡಿಯಾಗಿದೆ. ಹುಕ್ಕೇರಿಯಲ್ಲಿಯೂ ರಸ್ತೆ ತಡೆ ನಡೆಸಲಾಗಿದ್ದು, ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಬಾವನಸೌಂದತ್ತಿ ಗ್ರಾಮದಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ರಸ್ತೆ ಬಂದ್ ಮಾಡಲಾಗಿದೆ. ಅಥಣಿ ಪಟ್ಟಣದಲ್ಲಿ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಚಿಕ್ಕೋಡಿ ಉಪವಿಭಾಗದಲ್ಲಿ ಬಂದ್ಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗೆ ಮುಳ್ಳುಕಂಟಿಗಳನ್ನು ಹಾಕಿ ಸಂಚಾರ ತಡೆಯಲಾಗಿದೆ. ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಾವೇರಿಯ ಕಂಚಾರಗಟ್ಟಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ. ಕೆಲವರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿಯೂ ರಸ್ತೆ ತಡೆ ನಡೆದಿದೆ.
ಇನ್ನು ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ನಲ್ಲಿ ರೈತರು ಹೆದ್ದಾರಿಗೆ ಕಲ್ಲು, ಮುಳ್ಳುಗಳನ್ನು ಹಾಕಿ ಟ್ರ್ಯಾಕ್ಟರ್ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಭೇಟಿ ನೀಡಿ ರೈತರ ಮನವೊಲಿಸಲು ಪ್ರಯತ್ನಿಸಿದ್ದಾರೆ.
ರೈತ ಮುಖಂಡರ ಎಚ್ಚರಿಕೆ
ರೈತ ಮುಖಂಡರ ಎಚ್ಚರಿಕೆ
ಬೆಳಗಾವಿಯಲ್ಲಿ ಮಾತನಾಡಿದ ರೈತ ಮುಖಂಡ ಕಿಶನ್ ನಂದಿ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಾಗ ಆರ್ಥಿಕ ಇಲಾಖೆಯ ಅನುಮತಿ ಪಡೆದಿತ್ತೇ ಎಂದು ಪ್ರಶ್ನಿಸಿದ್ದಾರೆ. ಎರಡು ತಿಂಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಿ, ಪ್ರತಿ ಟನ್ ಕಬ್ಬಿಗೆ ₹1,000 ಪ್ರೋತ್ಸಾಹಧನ ನೀಡಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಕ್ಕರೆಗೆ ₹60 ಎಂಎಸ್ಪಿ ನಿಗದಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದೂ ಒತ್ತಾಯಿಸಿದ್ದಾರೆ. ಪೊಲೀಸರ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನಕ್ಕೆ ರೈತರು ಹೆದರುವುದಿಲ್ಲ, ಲಕ್ಷಾಂತರ ರೈತರು ಜೈಲಿಗೆ ಹೋಗಲು ಸಿದ್ಧರಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಮೂರು ಜಿಲ್ಲೆಗಳಲ್ಲಿ ನಿಷೇಧಾಜ್ಞೆ
ಮೂರು ಜಿಲ್ಲೆಗಳಲ್ಲಿ ನಿಷೇಧಾಜ್ಞೆ
ರೈತರ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಬಾಗಲಕೋಟೆ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಬಿಎನ್ಎಸ್ 163ರ ಅಡಿಯಲ್ಲಿ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ನಿರ್ಬಂಧ ವಿಧಿಸಲಾಗಿದೆ.
ವಿಜಯಪುರ ಜಿಲ್ಲೆಯ 10 ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆ ಹಾಗೂ ಹೆದ್ದಾರಿ ತಡೆಗೆ ಸಿದ್ಧತೆ ನಡೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಟೋಲ್ ಪ್ಲಾಜಾಗಳ ಪ್ರವೇಶ ಮತ್ತು ನಿರ್ಗಮನಕ್ಕೆ ಅಡ್ಡಿಪಡಿಸುವುದು, ವಾಹನಗಳನ್ನು ಅಡ್ಡಲಾಗಿ ನಿಲ್ಲಿಸಿ ರಸ್ತೆ ತಡೆ ನಡೆಸುವುದು ಹಾಗೂ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟುಮಾಡುವುದನ್ನು ನಿಷೇಧಿಸಲಾಗಿದೆ. ಆಂಬುಲೆನ್ಸ್, ಅಗ್ನಿಶಾಮಕ ಸೇರಿದಂತೆ ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಬಾರದು ಎಂದು ಸೂಚಿಸಲಾಗಿದೆ.
ಧಾರವಾಡ ಜಿಲ್ಲೆಯಲ್ಲಿಯೂ ಪುಣೆ-ಬೆಂಗಳೂರು, ಹುಬ್ಬಳ್ಳಿ-ಅಂಕೋಲಾ, ನವಲಗುಂದ-ಸೋಲಾಪುರ ಹಾಗೂ ಹುಬ್ಬಳ್ಳಿ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಅವುಗಳ ಸುತ್ತಮುತ್ತಲಿನ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಲಾಗಿದೆ.
ಒಟ್ಟಿನಲ್ಲಿ ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸಾರಿಗೆ ವ್ಯವಸ್ಥೆ ಹಾಗೂ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿದೆ. ರೈತರ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.

