ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ರಣ ಬಿಸಿಲು ಆರಂಭವಾಗಿದ್ದು ಹೀಟ್ ವೇವ್ ಭೀತಿ ಎದುರಾಗಿದೆ. ದಕ್ಷಿನ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬಳ್ಳಾರಿ, ಧಾರವಾಡ, ಬಾಗಲಕೋಟೆ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದೆ. ವಿಜಯನಗರ, ಕಲಬುರಗಿ, ಯಾದಗಿರಿ ಮತ್ತು ಹಾವೇರಿಯಲ್ಲಿಯೂ ಬಿಸಿಲಿನ ಝಳ ಹೆಚ್ಚಾಗಲಿದೆ.
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಮಟ್ಟದ ಇಳಿಕೆ ಕಂಡುಬರುವುದಿಲ್ಲ. ಬದಲಿಗೆ ಹಂತ ಹಂತವಾಗಿ 2 ಡಿಗ್ರಿ ಸೆಲ್ಶಿಯಸ್ನಿಂದ 3 ಡಿಗ್ರಿ ಸೆಲ್ಶಿಯಸ್ ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಶಿಯಸ್ನಿಂದ 42 ಡಿಗ್ರಿ ಸೆಲ್ಶಿಯಸ್ ವರೆಗೆ ದಾಖಲಾಗುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನದ ಸಮಯದಲ್ಲಿ ಸಾರ್ವಜನಿಕರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಬೇಕು.
ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಆರ್ದ್ರತೆಯಿಂದ ಕೂಡಿದ ವಾತಾವರಣ ಇರಲಿದೆ. ಬಾಗಲಕೋಟೆ, ರಾಯಚೂರು, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗಲಿನಲ್ಲಿ ಉಷ್ಣ ಅಲೆ ಇದ್ದರೆ ರಾತ್ರಿಯ ಅವಧಿಯಲ್ಲೂ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.
ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಕೊಂಚ ಮಳೆಯಾಗುವ ಸಾಧ್ಯತೆ ಇದ್ದು, ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರಲಿದೆ.

