ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲು ಆರಂಭವಾಗಿದ್ದು, ತಾಪಮಾನ ಹೆಚ್ಚಳದಿಂದಾಗಿ ಜನರು ಹೈರಾಣಾಗಿದ್ದಾರೆ. ಒಂದು ವಾರಗಳ ಕಾಲ ಕರ್ನಾಟಕ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಲ ಝಳ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಲಿದೆ. ಈ ಜಿಲ್ಲೆಗಳಲ್ಲಿ ಹೀಟ್ ವೇವ್ ಅಲರ್ಟ್ ನೀಡಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯ ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಉಷ್ಣ ಅಲೆ ಹೆಚ್ಚಾಗಿಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ಬಳ್ಳಾರಿ, ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಅತ್ಯಧಿಕ ತಾಪಮಾನದಿಂದಾಗಿ ಉಷ್ಣ ಅಲೆಯಿಂದಾಗಿ ಹೀಟ್ ಸ್ಟ್ರೋಕ್ ಆಗುವ ಸಾಧ್ಯತೆ ಹೆಚ್ಚು. ಇಂತಹ ಸಂದ್ರಭದಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕಾಫಿ/ಟೀ ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡುವಂತೆ ಸಲಹೆ ನೀಡಿದೆ.

