ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಕರಾವಳಿ ಜಿಲ್ಲೆಗಳಲಿ ಮತ್ತೆ ಉಷ್ಣ ಅಲೆ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.
ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

