ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಇಂದು ಹಾಗೂ ನಾಳೆ ಈ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಗಿದೆ. ಈ ನಡುವೆ ಕೊಡಗು ಮತ್ತು ಚಿಕ್ಕಮಗಳೂರಿನ ಕೆಲವು ತಾಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ-ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಹಲವು ದಿನಗಳಿಂದ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಇಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆಯಾ ತಾಲೂಕುಗಳ ತಹಶೀಲ್ದಾರ್‌ಗಳು ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದೆ. ಕೊಪ್ಪ ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮಳೆ ಸಂಬಂಧಿತ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತೆ ಭಾರೀ ಮಳೆ ಸಾದ್ಯತೆ ಇರುವ ಕಾರಣ ಪಿಯುಸಿವರೆಗೆ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನಲ್ಲಿ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 50-60 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ, ಹಾಸನದಲ್ಲಿಯೂ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು.
ಆಗಸ್ಟ್ 2ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗದಲ್ಲಿ ಧಾರಾಕಾರ ಮಳೆ ಸಾಧ್ಯತೆಯಿದ್ದು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉಳಿದ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.

