ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮತ್ತಷ್ಟು ಜೋರಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 6ರವರೆಗೆ ವ್ಯಾಅಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಹಾಗೂ ಬಿರುಗಾಳಿ ಅಬ್ಬರು ಇರಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಸೂಚನೆ ಪ್ರಕಾರ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಈ ಸಂದರ್ಭದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಪ್ರವಾಸಿಗರು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರ, ನದಿಗಳು ಮತ್ತು ಇತರೆ ಜಲಾಶಯಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಲೋ ಮೀಟರ್ ವೇಗದ ಗಾಳಿಯ ಜೊತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಜುಕೈ 1ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ,ಚಿತ್ರದುರ್ಗ, ದಾವಣಗೆರೆ, ಕೊಡಗು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿಯೂ ಮಳೆಯಾಗಲಿದೆ. ಇಂದು ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ. ನಾಳೆ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ.

