ಮುಂಬೈನ ವಾಂಖೆಡೆ ಕ್ರೀಡಾಂಗಣ ಇಂದು ( ಮಾರ್ಚ್ 5 ) ಐಸಿಸಿ ಟಿ20 ವಿಶ್ವಕಪ್ ಟೂರ್ನಿ 2026ರ ಎರಡನೇ ಸೆಮಿ ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.
ಈ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಜಯ ಸಾಧಿಸುವ ತಂಡ ಫೈನಲ್ ಪಂದ್ಯ ತಲುಪಿ ಮಾರ್ಚ್ 8ರಂದು ನ್ಯೂಜಿಲೆಂಡ್ ವಿರುದ್ಧ ಟ್ರೋಫಿಗಾಗಿ ಸೆಣಸಾಟ ನಡೆಸಲಿದೆ.
ಹೀಗಿರುವಾಗ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮಹತ್ವದ ಸೆಮಿ ಫೈನಲ್ ಪಂದ್ಯದಲ್ಲಿ ಯಾವ ತಂಡ ಗೆದ್ದು ನ್ಯೂಜಿಲೆಂಡ್ ವಿರುದ್ಧ ಸೆಣಸಾಟ ನಡೆಸಲು ಅರ್ಹತೆ ಗಿಟ್ಟಿಸಿಕೊಳ್ಳಲಿದೆ ಎಂಬ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿದ್ದು, ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ತಮ್ಮ ಎಕ್ಸ್ ಖಾತೆಯಲ್ಲಿ ಪಂದ್ಯದ ಕುರಿತು ಟ್ವೀಟ್ ಒಂದನ್ನು ಮಾಡಿದ್ದಾರೆ.
ಹೌದು, ನಿನ್ನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್ ಭರ್ಜರಿ ಜಯಸಾಧಿಸಿದ ಬೆನ್ನಲ್ಲೇ, ‘ ಭಾನುವಾರ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಇದೊಂದು ಅದ್ಭುತ ಪಂದ್ಯವಾಗಿರಲಿದೆ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋತು ಟೂರ್ನಿಯಿಂದ ಹೊರ ಬೀಳಲಿದೆ ಎಂದು ಕೆವಿನ್ ಪೀಟರ್ಸನ್ ಪರೋಕ್ಷವಾಗಿ ಭಾರತದ ಕಾಲು ಎಳೆದಿದ್ದಾರೆ.

