ಅಧಿಕಾರ ಹಸ್ತಾಂತರದ ಬಿಸಿಬಿಸಿ ಚರ್ಚೆಯ ನಡುವೆಯೇ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣದ ಪೈಪೋಟಿ ಜೋರಾಗಿದೆ. ಅದರಲ್ಲೂ ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಇದ್ದು, ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.
ಮಾರ್ಚ್ ತಿಂಗಳಿನಲ್ಲಿ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯಲಿದೆ. ಇದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬಣದ ಪೈಪೋಟಿಗೆ ಕಾರಣವಾಗಿದೆ. ಮೂವರು ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿದ್ದು, ತ್ರಿಕೋನ ಸ್ಪರ್ಧೆ ಇದೆ.
ಯಾರು ಆಕಾಂಕ್ಷಿಗಳು?: ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಡಿ.ಕೆ.ಸುರೇಶ್, ಬಳ್ಳಾರಿ, ಕೊಪ್ಪಳ-ರಾಯಚೂರು ಒಕ್ಕೂಟದ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ, ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅಧ್ಯಕ್ಷ ರೇಸ್‌ನಲ್ಲಿದ್ದಾರೆ.
ಹಲವು ದಿನಗಳಿಂದ ಕೆಎಂಎಫ್ ಅಧ್ಯಕ್ಷ ಹುದ್ದೆ ಖಾಲಿ ಇದ್ದು, ಈಗ ಬಣದ ಪೈಪೋಟಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ರಾಘವೇಂದ್ರ ಹಿಟ್ನಾಳ, ಕೆ.ವೈ.ನಂಜೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ನಾಯಕರು.
ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಡಿ.ಕೆ.ಸುರೇಶ್ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿದ್ದು, ಸದ್ಯದ ಮಾಹಿತಿ ಪ್ರಕಾರ ಡಿ.ಕೆ.ಸುರೇಶ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಗೆ ಅವಕಾಶ ನೀಡಲಾಗಿತ್ತು. ಆದ್ದರಿಂದ ಈ ಬಾರಿ ಡಿ.ಕೆ.ಶಿವಕುಮಾರ್ ಬಣಕ್ಕೆ ಅವಕಾಶ ನೀಡಬೇಕು ಎಂಬುದು ಒತ್ತಾಯವಾಗಿದೆ.
ಡಿ.ಕೆ.ಸುರೇಶ್ 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಸೋತರೂ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರಿಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊಡಿಸಬೇಕು ಎಂದು ಡಿ.ಕೆ.ಶಿವಕುಮಾರ್ ಬಯಸಿದ್ದಾರೆ.
ಸೋಮವಾರ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ಅಧ್ಯಕ್ಷ ಹಾಗೂ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದರು. ಕೆಎಂಎಫ್ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಅವರು ಸಿಎಂ ಜೊತೆ ಚರ್ಚಿಸಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಬಣದ ಭೀಮಾ ನಾಯಕ್ ಕೆಎಂಎಫ್ ಅಧ್ಯಕ್ಷರಾಗಿದ್ದರು. ಆದ್ದರಿಂದ ನನಗೆ ಅವಕಾಶ ತಪ್ಪಿತ್ತು. ಈ ಬಾರಿ ನನಗೆ ಅವಕಾಶ ಮಾಡಿಕೊಡಿ ಎಂದು ಮಾಲೂರು ಶಾಸಕ ನಂಜೇಗೌಡ ಸಹ ಒತ್ತಡ ಹಾಕುತ್ತಿದ್ದಾರೆ. ಆದ್ದರಿಂದ ಕೆಎಂಎಫ್ ಅಧ್ಯಕ್ಷ ಹುದ್ದೆ ಚುನಾವಣೆ ರಾಜ್ಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

