ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ವೇಳೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅಪರಾಧ ಪ್ರಕರಣಗಳು ವರದಿಯಾಗಿವೆ. ವ್ಯಕ್ತಿಯೋರ್ವನನ್ನು ಮನೆ ಮುಂದೆಯೇ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆ.ಪಿ.ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರೇಚಣ್ಣ ಕೊಲೆಯಾದ ಆಟೋ ಚಾಲಕ. ಕೊಳ್ಳೆಗಾಲ ಮೂಲದ ರೇಚಣ್ಣ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಾಸ್ ಆಗಿದ್ದರು. ತಡರತರಿ ಬಾರ್ ಗೆ ಹೋಗಿ ಕುಡಿದು ಮನೆಗೆ ಬಂದಿದ್ದರು. ಮನೆಯಿಂದ ಹೊರ ಬರುತ್ತಿದ್ದಂತೆಯೇ ರೇಚಣ್ಣ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಹಿಂದಿನಿಂದ ಬೆನ್ನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಹಲ್ಲೆಗೊಳಗಾದ ರೇಚಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೆಯ ಮುಂದೆಯೇ ಈ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

