ಬೆಂಗಳೂರು: ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಾಯಕರ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಈಗಾಗಲೇ ಮೂವರು ನಾಯಕರು ಕೆಪಿಸಿಸಿ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದು, ಹೈಕಮಾಂಡ್ ಮಟ್ಟದಲ್ಲಿ ಲಾಭಿ ನಡೆಸುತ್ತಿದ್ದಾರೆ.
ಪ್ರಮುಖವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸತೀಶ್ ಜಾರಕಿಹೊಳಿ ಹಾಗೂ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ನಡುವೆ ಪೈಪೋಟಿ ನಡೆಯುತ್ತಿದೆ. ಈ ನಡುವೆ ಶಿವರಾಜ್ ತಂಗಡಗಿ ಕೂಡ ತನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.
ಅಹಿಂದ ಕೋಟಾದಡಿ ಸತೀಶ್ ಜಾರಕಿಹೊಳಿ, ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಹುದ್ದೆಗಾಗಿ ಬೇಡಿಕೆ ಇಟ್ಟಿದ್ದಾರೆ. ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಸತೀಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಜೊತೆ ಮಾತನಾಡಿದ್ದಾರೆ. ಇನ್ನು ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಬಿ.ಕೆ.ಹರಿಪ್ರಸಾದ್ ಹೆಸರು ಕೇಳಿಬರುತ್ತಿದೆ. ಒಬಿಸಿ ಸಮುದಾಯದ ಲೆಕ್ಕಾಚರದಲ್ಲಿ ಹರಿಪ್ರಸಾದ್ ಹೆಸರು ಚರ್ಚೆಯಲ್ಲಿದೆ.
ಈ ಬೆಳವಣಿಗೆಗಳ ನಡುವೆ ಶಿವರಾಜ್ ತಂಗಡಗಿ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮನವಿ ಮಾಡಿದ್ದಾರೆ. ಈಗಾಗಲೇ ಹೈಕಮಾಂಡ್ ಕೂಡ ತಂಗಡಗಿ ಜೊತೆ ಮಾತುಕತೆ ನಡೆಸಿದೆ ಎಂದು ತಿಳಿದುಬಂದಿದೆ. ಅಂತಿಮವಾಗಿ ಕೆಪಿಸಿಸಿ ಅಧ್ಯಕ್ಷ ಪಟ್ಟ ಯಾರಿಗೆ ಒಲಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.

