ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಲೋಕಸೇವಾ ಆಯೋಗ(KPSC) ಭ್ರಷ್ಟಾಚಾರದ ಕೂಪವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿವಿಧ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು. ಯಾವುದೇ ತನಿಖೆ ನಡೆಸಲಿಲ್ಲ. ಯಾವುದೇ ತಿದ್ದುಪಡಿ ಕಾಯ್ದೆಯನ್ನು ಕೂಡ ತರಲಿಲ್ಲ. ವಿಧಾನ ಮಂಡಲದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಬಗ್ಗೆ ಸಾಕಷ್ಟು ಬಾರಿ ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅತಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ಕಾನೂನು ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಅದಲು ಬದಲು ಆಗಿದೆ. ಆ ಕಾಲೇಜಿನ ಹೆಸರು ಸಿದ್ದಾರ್ಥ ಲಾ ಕಾಲೇಜ್. ಸಿದ್ದಾರ್ಥ ಲಾ ಕಾಲೇಜು ಖರ್ಗೆ ಅವರ ಅಳಿಯನದು ಎನ್ನುವ ಮಾಹಿತಿ ಇದೆ. ಈ ಬಗ್ಗೆ ತನಿಖೆ ನಡೆದಿಲ್ಲ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಪ್ರಶ್ನಿಸಿದ್ದಾರೆ.
ಕೆಪಿಎಸ್ಸಿ ಅಧ್ಯಕ್ಷರ ಇಬ್ಬರು ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಅಕ್ರಮವಾಗಿದ್ದರೂ ಏಕೆ ತನಿಖೆ ಆಗುತ್ತಿಲ್ಲ? ಈ ಬಗ್ಗೆ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

