HomeKarnatakaಸಾರ್ವಜನಿಕರೇ ಗಮನಿಸಿ: ಸ್ವಚ್ಛವಾಗದ ನಿವೇಶನಗಳಿಗೆ ನೋಟಿಸ್ ಅಂಟಿಸಲು ಕೃಷ್ಣಬೈರೇಗೌಡ ಆದೇಶ

ಸಾರ್ವಜನಿಕರೇ ಗಮನಿಸಿ: ಸ್ವಚ್ಛವಾಗದ ನಿವೇಶನಗಳಿಗೆ ನೋಟಿಸ್ ಅಂಟಿಸಲು ಕೃಷ್ಣಬೈರೇಗೌಡ ಆದೇಶ

ಬೆಂಗಳೂರು-ನಗರದ ಐದೂ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಚ್ಛಗೊಳಿಸಬೇಕಾದ ಖಾಲಿ ನಿವೇಶನಗಳನ್ನು ಗುರುತಿಸಿ, ಅವುಗಳಿಗೆ ನೋಟೀಸ್ ಅಂಟಿಸಿ, ತ್ವರಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಕುರಿತು ಸೋಮವಾರ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾಲಿ ನಿವೇಶನಗಳ ಮಾಲೀಕರು ಸ್ವತಃ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಆಗಸ್ಟ್ 22ರವರೆಗೆ ಗಡುವು ನೀಡಲಾಗಿತ್ತು. ಆದರೆ, ಈ ಪೈಕಿ ಕೆಲವೇ ಪ್ರದೇಶಗಳಲ್ಲಿ ಶೇ.20ರಷ್ಟು ನಿವೇಶನಗಳ ಮಾಲೀಕರು ಮಾತ್ರ ಸ್ವತಃ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಎಲ್ಲಾ ಖಾಲಿ ನಿವೇಶನಗಳಲ್ಲಿಯೂ ಪರಿಣಾಮಕಾರಿಯಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕಿದ್ದು, ಈ ನಿಟ್ಟಿನಲ್ಲಿ ಐದೂ ನಗರ ಪಾಲಿಕೆಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸ್ವಚ್ಛತಾ ಕಾರ್ಯವನ್ನು ಸಕ್ರಿಯವಾಗಿ ನಡೆಸಬೇಕು. ಇದಕ್ಕೆ ತಗಲುವ ವೆಚ್ಚವನ್ನು ಆಸ್ತಿ ತೆರಿಗೆ ಮೂಲಕ ವಸೂಲಿ ಮಾಡಬೇಕು ಎಂದು ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೋಟೀಸ್ ಅಂಟಿಸಿ ಸ್ವಚ್ಛತಾ ಕಾರ್ಯ ಆರಂಭಿಸಿ

ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕಾದ ಖಾಲಿ ನಿವೇಶನಗಳನ್ನು ಕಂದಾಯ ಅಧಿಕಾರಿಗಳು ಗುರುತಿಸಿ ಪಟ್ಟಿ ಮಾಡಬೇಕು. ಪಟ್ಟಿ ಮಾಡಲಾದ ನಿವೇಶನಗಳಿಗೆ ಮಾರ್ಷಲ್‌ಗಳು ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರು ನೋಟೀಸ್ ಅಂಟಿಸಬೇಕು. ಬಳಿಕ ಪಾಲಿಕೆಯ ವತಿಯಿಂದ ನಿವೇಶನಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಇದೇ ಗುರುವಾರದಿಂದ ಎಲ್ಲಾ ನಗರ ಪಾಲಿಕೆಗಳಲ್ಲಿಯೂ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯವನ್ನು ಆರಂಭಿಸಬೇಕು. ಮುಂದಿನ ಸೋಮವಾರದಿಂದ ಈ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಯಂತ್ರೋಪಕರಣ ಮತ್ತು ಸಿಬ್ಬಂದಿ ಸಿದ್ಧತೆ

ನಗರದಾದ್ಯಂತ ಖಾಲಿ ನಿವೇಶನಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜೆಸಿಬಿ, ಟಿಪ್ಪರ್, ಟ್ರ್ಯಾಕ್ಟರ್ ಹಾಗೂ ಅಗತ್ಯ ಸಿಬ್ಬಂದಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸ್ವಚ್ಛತಾ ಕಾರ್ಯಕ್ಕಾಗಿ ಏಜೆನ್ಸಿಗಳನ್ನು ಗುರುತಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವೀಡಿಯೋ ದಾಖಲೀಕರಣ ಮತ್ತು ತ್ಯಾಜ್ಯ ವಿಲೇವಾರಿ

ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೊದಲು ಮತ್ತು ನಂತರದ ಸ್ಥಿತಿಯನ್ನು ಜಿಯೋ-ಲೊಕೇಷನ್ ಸಹಿತ ವೀಡಿಯೋದಲ್ಲಿ ಕಡ್ಡಾಯವಾಗಿ ದಾಖಲಿಸಬೇಕು. ಈ ವೀಡಿಯೋ ದಾಖಲೆಗಳ ಆಧಾರದ ಮೇಲೆಯೇ ಗುತ್ತಿಗೆದಾರರಿಗೆ ಹಣ ಪಾವತಿಸುವ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸ್ವಚ್ಛತಾ ಕಾರ್ಯ ಕೈಗೊಂಡ ಬಳಿಕ ಸಂಗ್ರಹವಾಗುವ ತ್ಯಾಜ್ಯ ಹಾಗೂ ಭಗ್ನಾವಶೇಷಗಳನ್ನು ರಸ್ತೆ ಬದಿ ಅಥವಾ ಇತರೆ ಖಾಲಿ ಜಾಗಗಳಲ್ಲಿ ವಿಲೇವಾರಿ ಮಾಡಬಾರದು. ಪಾಲಿಕೆ ಗುರುತಿಸಿರುವ ಅಧಿಕೃತ ಸ್ಥಳಗಳಲ್ಲಿಯೇ ಅವುಗಳನ್ನು ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಸಂಬಂಧ ಸ್ವಚ್ಛತಾ ಕಾರ್ಯಕ್ಕಾಗಿ ಅಭಿವೃದ್ಧಿಪಡಿಸಿರುವ ‘clear it’ ತಂತ್ರಾಂಶದಲ್ಲಿ ಸ್ವಚ್ಛತಾ ಕಾರ್ಯದ ಸಂಪೂರ್ಣ ಮಾಹಿತಿಯು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಅಧಿಕಾರಿಗಳಿಗೆ ಸೂಚಿಸಿದರು.

ನಾಗರಿಕರ ಭಾಗವಹಿಸುವಿಕೆಗೆ ಅವಕಾಶ

ಸ್ವಚ್ಛತಾ ಕಾರ್ಯ ಕೈಗೊಳ್ಳದಿರುವ ಖಾಲಿ ನಿವೇಶನಗಳ ಮಾಹಿತಿಯನ್ನು ನಾಗರಿಕರು ‘clear it’ ತಂತ್ರಾಂಶದ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಈ ಸಂಬಂಧ ತಂತ್ರಾಂಶದಲ್ಲಿ ಅಗತ್ಯ ವ್ಯವಸ್ಥೆಯನ್ನು ಕೂಡಲೇ ಅಭಿವೃದ್ಧಿಪಡಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು

ಸಭೆಯಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್., ಜಿ. ಜಗದೀಶ್, ಡಾ. ರಾಜೇಂದ್ರ ಕೆ.ವಿ., ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಸಿಇಒ ಕರೀಗೌಡ, ಅಪರ ಆಯುಕ್ತರು, ಜಂಟಿ ಆಯುಕ್ತರು, ಉಪ ಆಯುಕ್ತರು, ಮುಖ್ಯ ಅಭಿಯಂತರರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular